ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸ ಬಸ್‌ಗಳಿಗೆ ಬೇಡಿಕೆ ಇದ್ದು, ಶೀಘ್ರ 300 ಬಸ್ ಒದಗಿಸಲಾಗುವುದು. ಈ ಪೈಕಿ 100 ಎಲೆಕ್ಟ್ರಿಕಲ್ ಬಸ್‌ಗಳು ಇರಲಿವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಿರ್ಮಿಸಿದ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್‌ಗಳು ಕಾರ್ಯಾಚರಣೆ ಆರಂಭಿಸಿದರೆ ಸಾರ್ವಜನಿಕರು ಪರದಾಡುವುದು ತಪ್ಪುತ್ತದೆ. ಶಾಲೆ–ಕಾಲೇಜುಗಳ ವಿದ್ಯಾರ್ಥಿಗಳ ಕುಂದುಕೊರತೆ ಪರಿಹರಿಸಲು ಅನುಕೂಲವಾಗುತ್ತದೆ’ ಎಂದು ನುಡಿದರು.
‘ಟ್ರ್ಯಾಕ್ಟರ್‌ಗಳು ಮತ್ತು ಇತರೆ ವಾಹನಗಳಲ್ಲಿ ಧ್ವನಿವರ್ಧಕ ವ್ಯವಸ್ಥೆ ಅಳವಡಿಸಿ, ಹೆಚ್ಚಿನ ಪ್ರಮಾಣದಲ್ಲಿ ಶಬ್ದ ಮಾಡುತ್ತ ಅಪಘಾತಕ್ಕೆ ಕಾರಣವಾಗುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ತಿಳಿಸಿದರು.
‘ಸರ್ಕಾರಕ್ಕೆ ಹೆಚ್ಚಿನ ಆದಾಯ ತರುವ ಇಲಾಖೆಗಳಲ್ಲಿ ಸಾರಿಗೆ ಇಲಾಖೆಯೂ ಒಂದಾಗಿದೆ. ವಿವಿಧ ಕೆಲಸಗಳ ನಿಮಿತ್ತ ಕಚೇರಿಗೆ ಬರುವವರಿಗೆ ಅನುಕೂಲ ಕಲ್ಪಿಸಿಕೊಡಬೇಕು. ಈ ವರ್ಷ ₹15 ಸಾವಿರ ಕೋಟಿ ಆದಾಯ ಸಂಗ್ರಹದ ಗುರಿ ನೀಡಲಾಗಿದೆ. ಅದನ್ನು ಈಡೇರಿಸಲು ಸಿಬ್ಬಂದಿ ಶ್ರಮಿಸಬೇಕು. ಕಚೇರಿ ಆವರಣಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು’ ಎಂದರು.
‘ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿದ ನಗರ ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಲೋಕಾರ್ಪಣೆ ಮಾಡಲಾಗುವುದು’ ಎಂದು ತಿಳಿಸಿದರು.
ಶಾಸಕ ಮಹಾಂತೇಶ ಕೌಜಲಗಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಇತರರಿದ್ದರು. ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತೆ ಎಂ.ಪಿ.ಓಂಕಾರೇಶ್ವರಿ ಸ್ವಾಗತಿಸಿದರು.
ಸಾರಿಗೆ ಇಲಾಖೆ ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಬಹಳಷ್ಟಿದೆ. ಅದನ್ನು ನೀಗಿಸಿದರೆ ಸಾರ್ವಜನಿಕರ ಸೇವೆಗೆ ಅನುಕೂಲವಾಗುತ್ತದೆಆಸಿಫ್ ಸೇಠ್ ಶಾಸಕ
ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಹೆಬ್ಬಾಳಕರ ‘ಬೆಳಗಾವಿ ನಗರ ಈಗ ವೇಗವಾಗಿ ಬೆಳೆಯುತ್ತಿದೆ. ಇಲ್ಲಿ ₹10 ಕೋಟಿ ವೆಚ್ಚದಲ್ಲಿ ಸಾರಿಗೆ ಇಲಾಖೆಯ ಹೊಸ ಕಟ್ಟಡ ನಿರ್ಮಾಣವಾಗಿದ್ದು ಸಿಬ್ಬಂದಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತ್ವರಿತವಾಗಿ ಸೇವೆ ಒದಗಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕೋರಿದರು. ‘ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ ಎಂದು ಬಿಜೆಪಿಯವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ನಾವು ‘ಗ್ಯಾರಂಟಿ’ಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಿಕೊಂಡು ಬಂದಿದ್ದೇವೆ. ನಮ್ಮ ‘ಗ್ಯಾರಂಟಿ’ಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ಈಗ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ’ ಎಂದು ಲೇವಡಿ ಮಾಡಿದರು.
ಚಾಲನಾ ಪರವಾನಗಿ ನೀಡುವ ವ್ಯವಸ್ಥೆ ಬಲಪಡಿಸಿ: ಸತೀಶ ‘ಭವಿಷ್ಯದಲ್ಲಿ ಅಪಘಾತಗಳ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ವಾಹನಗಳ ಚಾಲನಾ ಪರವಾನಗಿ ನೀಡುವ ವ್ಯವಸ್ಥೆ ಬಲಪಡಿಸುವ ಅಗತ್ಯವಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ‘ಸಾರಿಗೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಅಪಘಾತ ವಲಯಗಳನ್ನು ಗುರುತಿಸಿ ಅಪಘಾತಗಳ ಪ್ರಮಾಣ ಕಡಿಮೆಗೊಳಿಸಲು ಕ್ರಮ ವಹಿಸಬೇಕು. ಕೆಲವು ಟ್ರ್ಯಾಕ್ಟರ್‌ನವರು ಧ್ವನಿವರ್ಧಕ ವ್ಯವಸ್ಥೆ ಅಳವಡಿಸಿಕೊಂಡು ಜೋರಾಗಿ ಶಬ್ದ ಮಾಡುತ್ತ ಸಂಚರಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ವ್ಹೀಲಿಂಗ್‌ನಲ್ಲಿ ತೊಡಗುವ ದ್ವಿಚಕ್ರ ವಾಹನ ಸವಾರರ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು. ‘ಬಸ್‌ಗಳ ಕೊರತೆಯಿಂದ ಸಾರ್ವಜನಿಕರಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಸಾರಿಗೆ ಸಂಸ್ಥೆಯ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗಗಳಿಗೆ 200 ಬಸ್‌ಗಳನ್ನು ಒದಗಿಸಬೇಕು. ಜಿಲ್ಲೆಯ ಹಲವೆಡೆ ಸಾರಿಗೆ ಸಂಸ್ಥೆಯ ಹೊಸ ಘಟಕಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.