ADVERTISEMENT

52,790 ವಿದ್ಯಾರ್ಥಿಗಳ ನೋಂದಣಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2020, 10:07 IST
Last Updated 3 ಮಾರ್ಚ್ 2020, 10:07 IST

ಬೆಳಗಾವಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 4ರಿಂದ 23ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ (24,194) ಹಾಗೂ ಚಿಕ್ಕೋಡಿ (28596) ಶೈಕ್ಷಣಿಕ ಜಿಲ್ಲೆಗಳ ಒಟ್ಟು 52,790 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ.

ಚಿಕ್ಕೋಡಿಯ 45 ಹಾಗೂ ಬೆಳಗಾವಿಯ 34 ಸೇರಿ ಒಟ್ಟು 79 ಕೇಂದ್ರಗಳಲ್ಲಿ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ.

ಚಿಕ್ಕೋಡಿಯಲ್ಲಿ 23,385 ವಿದ್ಯಾರ್ಥಿಗಳು ಹೊಸಬರು (ಫ್ರೆಶರ್ಸ್‌), 3,910 ಮಂದಿ ರಿಪೀಟರ್ಸ್‌ ಹಾಗೂ 1,301 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 8,998 ಕಲಾ, 9,015 ವಾಣಿಜ್ಯ ಮತ್ತು 6,181 ವಿಜ್ಞಾನದ ವಿದ್ಯಾರ್ಥಿಗಳಾಗಿದ್ದಾರೆ.

ADVERTISEMENT

ಬೆಳಗಾವಿಯಲ್ಲಿ 19,398 ಹೊಸಬರು, 3,785 ಮಂದಿ ರಿಪೀಟರ್ಸ್‌ ಹಾಗೂ 1,011 ಖಾಸಗಿ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. 13,424 ಕಲಾ, 8,257 ವಾಣಿಜ್ಯ ಹಾಗೂ 6,915 ವಿಜ್ಞಾನ ವಿದ್ಯಾರ್ಥಿಗಳಾಗಿದ್ದಾರೆ.

‘ಪರೀಕ್ಷೆಗೆ ಅಗತ್ಯವಾದ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯುವುದಕ್ಕೂ ಕ್ರಮ ವಹಿಸಲಾಗಿದೆ. ಎಲ್ಲ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಕಾಲೇಜಿಗೆ ಸಂಬಂಧಿಸಿದ ಸಿಬ್ಬಂದಿ ನಿಯೋಜನೆಗೊಳ್ಳದಂತೆ ನೋಡಿಕೊಂಡಿದ್ದೇವೆ. ತಾಲ್ಲೂಕಿಗೊಂದು ಹಾಗೂ ಜಿಲ್ಲಾ ಮಟ್ಟದಲ್ಲಿ ವಿಚಕ್ಷಣಾ ದಳಗಳನ್ನು ರಚಿಸಲಾಗಿದೆ. ಸಿಟಿಂಗ್‌ ಸ್ಕ್ವಾಡ್ ಕೂಡ ಕಾರ್ಯನಿರ್ವಹಿಸಲಿದೆ. ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಮೊದಲಾದ ಮೂಲಸೌಲಭ್ಯ ಒದಗಿಸಲಾಗಿದೆ’ ಎಂದು ಡಿಡಿಪಿಯು ಆರ್‌.ಎನ್. ಪಟ್ಟಣಶೆಟ್ಟಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

‘ಜಿಲ್ಲಾ ಕೇಂದ್ರದಿಂದ ಪ್ರಶ್ನೆಪತ್ರಿಕೆಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್‌ ಸಾಧನ ಅಳವಡಿಸಲಾಗಿದೆ. ಹೀಗಾಗಿ, ಜಿಲ್ಲಾಧಿಕಾರಿ ಕಚೇರಿಯಿಂದಲೇ ಎಲ್ಲ ವಾಹನಗಳ ಮಾಹಿತಿ ಪಡೆಯಬಹುದಾಗಿದೆ ಹಾಗೂ ಕಣ್ಣಿಡಲಾಗಿದೆ. 25 ವಾಹನಗಳನ್ನು ಬಳಸಲಾಗುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮವನ್ನು ಕೇಂದ್ರ ಕಚೇರಿಯ ಮಟ್ಟದಿಂದಲೇ ಮಾಡಲಾಗಿದೆ’ ಎಂದು ತಿಳಿಸಿದರು.

‘ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಕಾಲೇಜುಗಳು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ಪಠ್ಯಕ್ರಮದ ಬೋಧನೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ ತರಗತಿಗಳನ್ನು ನಡೆಸಿ ಸರಿದೂಗಿಸಲಾಗಿದೆ. ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ಸಜ್ಜುಗೊಳಿಸಲಾಗಿದೆ. ಸರಣಿ ಪರೀಕ್ಷೆಗಳನ್ನು ನಡೆಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ವಿಷಯಕ್ಕೆ ಸಂಬಂಧಿಸಿದಂತೆ ವಿಶೇಷ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.