ADVERTISEMENT

Belagavi Rains | ಒಳಹರಿವು ಹೆಚ್ಚಳ; ನದಿ ಪಾತ್ರಗಳಲ್ಲಿ ಎಚ್ಚರಿಕೆ ಗಂಟೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2023, 14:39 IST
Last Updated 23 ಜುಲೈ 2023, 14:39 IST
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಎಸ್ಪಿ ಡಾ.ಸಂಜೀವ ಪಾಟೀಲ ಅವರು ಭಾನುವಾರ ದೂಧಗಂಗಾ ನದಿ ಪಾತ್ರ ಪರಿಶೀಲನೆ ಮಾಡಿದರು
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಎಸ್ಪಿ ಡಾ.ಸಂಜೀವ ಪಾಟೀಲ ಅವರು ಭಾನುವಾರ ದೂಧಗಂಗಾ ನದಿ ಪಾತ್ರ ಪರಿಶೀಲನೆ ಮಾಡಿದರು    

ಬೆಳಗಾವಿ: ‘ಉತ್ತಮ ಮಳೆಯ ಕಾರಣ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ. ಸದ್ಯಕ್ಕೆ ಪ್ರವಾಹದ ಆತಂಕವಿಲ್ಲ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಜಿಲ್ಲೆಯ ವಿವಿಧ ನದಿ ಪಾತ್ರ ಹಾಗೂ ಅಣೆಕಟ್ಟೆಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಮಾಹಿತಿ ನೀಡಿದರು. ಕೃಷ್ಣಾ ನದಿಯಲ್ಲಿ 1.07 ಲಕ್ಷ ಕ್ಯುಸೆಕ್, ಘಟಪ್ರಭಾ ನದಿಯಲ್ಲಿ 30 ಸಾವಿರ ಕ್ಯುಸೆಕ್ ಹಾಗೂ ಮಲಪ್ರಭಾ ನದಿಯಲ್ಲಿ 13.50 ಸಾವಿರ ಕ್ಯುಸೆಕ್ ಒಳಹರಿವು ಇದೆ. ಆಲಮಟ್ಟಿ, ಹಿಡಕಲ್ ಮತ್ತು ನವಿಲುತೀರ್ಥ ಜಲಾಶಯಗಳಲ್ಲಿ ಕ್ರಮೇಣವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಕುಡಿಯಲು ಹಾಗೂ ಬೆಳೆಗಳಿಗೆ ಅನುಕೂಲವಾಗಲಿದೆ’ ಎಂದರು.

‘ಸಣ್ಣ ಸೇತುವೆಗಳು ಮುಳುಗಡೆಯಾಗಿದ್ದು, ಸಾರ್ವಜನಿಕರು ಹಾಗೂ ರೈತರು ಎಚ್ಚರಿಕೆ ವಹಿಸಬೇಕು. ಜಲಾವೃತವಾಗಿರುವ ಈ ಮಾರ್ಗಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು‌. ಪ್ರವಾಹ ಪರಿಸ್ಥಿತಿ ಎದುರಾಗಿಲ್ಲ. ಆದಾಗಿಯೂ ಮುಂಜಾಗ್ರತಾ ಕ್ರಮವಾಗಿ ನದಿತೀರದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT
ಬೆಳಗಾವಿ ತಾಲ್ಲೂಕಿನ ಬಸವನ ಕುಡಚಿ ವ್ಯಾಪ್ತಿಯ ಕಬ್ಬು ನಾಟಿ ಮಾಡಿದ ಗದ್ದೆಯಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿದ್ದು ಭಾನುವಾರ ಕಂಡುಬಂತು.

‘ಸಂಭವನೀಯ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾಳಜಿ ಕೇಂದ್ರಗಳನ್ನು ಕೂಡ ಗುರುತಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಜನರು ಹಾಗೂ ಜಾನುವಾರುಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬೋಟ್ ಮತ್ತಿತರ ಸಲಕರಣೆಗಳು ಸಿದ್ಧವಾಗಿ ಇಟ್ಟುಕೊಳ್ಳಲಾಗಿದೆ. ಔಷಧವಸ್ತುಗಳು, ಜಾನುವಾರುಗಳಿಗೆ ಮೇವು ಸೇರಿದಂತೆ ಪ್ರತಿಯೊಂದು ವಿಷಯಗಳ ಬಗ್ಗೆ ಸಿದ್ಧತೆ ನಡೆದಿದೆ’ ಎಂದರು.

‘ಮಳೆಯ ಹಿನ್ನೆಲೆಯಲ್ಲಿ ಜಲಪಾತಗಳಿಗೆ ಭೇಟಿಯ ಪ್ರಮಾಣ ಹೆಚ್ಚಾಗಿದೆ. ಆದರೆ ಸುರಕ್ಷತೆ ದೃಷ್ಟಿಯಿಂದ ಅರಣ್ಯ ಪ್ರದೇಶದೊಳಗಿರುವ ಜಲಪಾತಗಳಿಗೆ ಭೇಟಿ ನಿರ್ಬಂಧಿಸಲಾಗಿದೆ. ನಿಗಾ ವಹಿಸಲು ಅರಣ್ಯ ಇಲಾಖೆಯ ಸಿಬ್ಬಂದಿ, ಪ್ರವಾಸಿಮಿತ್ರರು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ’ ಎಂದು ವಿವರಿಸಿದರು.

ಸೇತುವೆ ಸಂಚಾರ ನಿರ್ಬಂಧ: ‘ಜಿಲ್ಲೆಯ 17 ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಸೇತುವೆ ಮೇಲೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದರು.

ಬೆಳಗಾವಿಯ ವಿವಿಧ ಬಡಾವಣೆಗಳಿಗೆ ಭಾನುವಾರ ಭೇಟಿ ನೀಡಿದ ಮೇಯರ್‌ ಶೋಭಾ ಸೋಮನಾಚೆ, ಉಪಮೇಯರ್‌ ರೇಷ್ಮಾ ಪಾಟೀಲ ಅವರು ಮಳೆಯಿಂದ ಆದ ಹಾನಿಯ ಪರಿಶೀಲನೆ ನಡೆಸಿದರು.

‘ಈ ಸೇತುವೆಗಳ ಎರಡೂ ಬದಿಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ವಾಹನ ಹಾಗೂ ಸಾರ್ವಜನಿಕರ ಸಂಚಾರ ನಿರ್ಬಂಧಿಸಲಾಗಿದೆ. ನೀರಿನ ಒಳಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನದಿಪಾತ್ರದ ಗ್ರಾಮಗಳಲ್ಲಿ ಸುರಕ್ಷತೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಅದೇ ರೀತಿ ಪ್ರವಾಸಿ ತಾಣಗಳಲ್ಲೂ ಸಿಬ್ಬಂದಿ ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ’ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್ ಗಿತ್ತೆ ಸೇರಿದಂತೆ ಕಂದಾಯ, ನೀರಾವರಿ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು ಇದ್ದರು.

ಶಾಲೆಗಳಿಗೆ ರಜೆ

ವ್ಯಾಪಕ ಮಳೆಯ ಕಾರಣ ಖಾನಾಪುರ, ಚನ್ನಮ್ಮನ ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ (ಜುಲೈ 24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಬೆಳಗಾವಿಯ ಧರ್ಮನಾಥ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ನದಿಪಾತ್ರದ ಜನರಿಗೆ ಎಚ್ಚರಿಕೆ

ನಿಪ್ಪಾಣಿ ತಾಲ್ಲೂಕಿನ ವೇದಗಂಗಾ, ದೂಧಗಂಗಾ ನದಿಪಾತ್ರದಲ್ಲಿ ತಂಡ ಪರಿಶೀಲನೆ ಕೈಗೊಂಡಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕಿ ಶಶಿಕಲಾ ಜೊಲ್ಲೆ, ಸಂಭವನೀಯ ಪ್ರವಾಹ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿದರು.

ನದಿಪಾತ್ರದ ಭೀವಶಿ, ಕಾರದಗಾ, ಜತ್ರಾಟ, ಭರವಾಡ, ಕುನ್ನೂರ ಮತ್ತು ಭೋಜ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನೀರು ಹೆಚ್ಚಾದ ಕಾರಣ ನದಿಪಾತ್ರದ ಜನರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.