ADVERTISEMENT

ಬೆಳಗಾವಿ | ‘ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ’

ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 15:37 IST
Last Updated 13 ಜುಲೈ 2024, 15:37 IST
ಬೆಳಗಾವಿಯಲ್ಲಿ ಶನಿವಾರ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅಧಿಕಾರಿಗಳ ಸಭೆ ನಡೆಸಿದರು
ಬೆಳಗಾವಿಯಲ್ಲಿ ಶನಿವಾರ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅಧಿಕಾರಿಗಳ ಸಭೆ ನಡೆಸಿದರು   

ಬೆಳಗಾವಿ: ‘ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ– ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.

ನಗರದಲ್ಲಿ ಶನಿವಾರ ನಡೆದ ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು, ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿರುವ ಕುರಿತು ಕೆಲವು ದೂರುಗಳು ಬರುತ್ತಿವೆ. ಹಾಗಾಗಿ ಯಾವುದೇ ಮಧ್ಯವರ್ತಿಗಳು ಇಲ್ಲದೇ ಯೋಜನೆಗಳ ಸೌಲಭ್ಯ ಫಲಾನುಭವಿಗೆ ದೊರೆಯುವಂತೆ ಎಲ್ಲ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಇಲಾಖೆ ಯೋಜನೆಗಳಿಗಾಗಿ ಸಲ್ಲಿಸಿದ ಅರ್ಜಿಗಳ ಮಾಹಿತಿಯನ್ನು ಅಧಿಕಾರಿಗಳು ಕಡ್ಡಾಯವಾಗಿ ತರಬೇಕು. ಸಭೆಗೆ ಮುಂಚಿತವಾಗಿ ಎಲ್ಲಾರಿಗೂ ಸಭೆಯ ಬಗ್ಗೆ ಮಾಹಿತಿ ನೀಡಲಾಗಿದೆ’ ಎಂದು ದಾಖಲಾತಿ ಒದಗಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿದ ಅಲೆಮಾರಿಗಳ, ಅರೆ ಅಲೆಮಾರಿ ಜನನಗಳ ಅಂಕಿ– ಅಂಶಗಳನ್ನು ಮಾಹಿತಿಗಾಗಿ ಸಂಗ್ರಹಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಕೆಲವು ಬ್ಯಾಂಕ್ ಸಾಲ ಸೌಲಭ್ಯ ನೀಡುವುದಿಲ್ಲ ಅಂತಹ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ನಿರ್ದೇಶನ ನೀಡುವಂತೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ ಹಾಗೂ ಇತರ ಅಧಿಕಾರಿಗಳು ಇದ್ದರು.

ರಾಜ್ಯದಲ್ಲಿದ್ದಾರೆ 10.90 ಲಕ್ಷ ಅಲೆಮಾರಿಗಳು’ ‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾದರೂ ನಮ್ಮ ಜನ ಇನ್ನೂ ಅರಣ್ಯದಲ್ಲೇ ವಾಸವಿದ್ದಾರೆ. 2011ರ ಜಾತಿ ಗಣತಿ ಪ್ರಕಾರ ರಾಜ್ಯದಲ್ಲಿ 10.90 ಲಕ್ಷ ಜನ ಅಲೆಮಾರಿಗಳಿದ್ದಾರೆ. ಸರ್ಕಾರದಿಂದ‌ ಬರುವ ಕಾರ್ಯಕ್ರಮಗಳ ಬಗ್ಗೆ ಅವರಿಗೆ ಅರಿವಿಲ್ಲ’ ಎಂದು ಜಿ.ಪಲ್ಲವಿ ಹೇಳಿದರು. ‘2019ರಲ್ಲಿ ಸಿದ್ದರಾಮಯ್ಯ ಅವರು ಅಲೆಮಾರಿ ಕೋಶ ಪ್ರಾರಂಭ ಮಾಡಿದರು. ನಂತರ ಇದು ನಿಗಮವಾಗಿ ಬದಲಾವಣೆ ಆಗಿದೆ. ಅಲೆಮಾರಿ ಸಮುದಾಯಗಳ ಮುಖಂಡರನ್ನು ಭೇಟಿಯಾಗಲು ಬಂದಿದ್ದೇನೆ. ಇಲ್ಲಿ ಎಲ್ಲರಿಗೂ ಭೇಟಿಯಾಗಿ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುತ್ತೇನೆ. ನಾಳೆ ಜಿಲ್ಲೆಯ ಅಲೆಮಾರಿ ಮುಖಂಡರೊಂದಿಗೆ ಸಮನ್ವಯ ಸಭೆ ಮಾಡುತ್ತಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.