ಬೆಳಗಾವಿ: ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ವೃದ್ಧರೊಬ್ಬರು ಶಂಕಿತ ಕೊರೊನಾದಿಂದ ಬುಧವಾರ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
70 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ ಅವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಧಿಕ ರಕ್ತದೊತ್ತಡ, ಮಧುಮೇಹ, ಕಿಡ್ನಿ ಸಮಸ್ಯೆ, ಮಿದುಳು ಸಂಬಂಧಿ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಕೊರೊನಾ ಲಕ್ಷಣಗಳು ಕಂಡುಬಂದ ಕಾರಣ ಅವರನ್ನು ಬುಧವಾರ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡಿಗೆ ಸ್ಥಳಾಂತರಿಸಲಾಗಿತ್ತು.
ಬುಧವಾರ ಸಂಜೆ ರ‍್ಯಾಪಿಡ್ ಟೆಸ್ಟ್ ಮಾಡಲಾಗಿದ್ದು, ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರ ಗಂಟಲು ಮಾದರಿ ಸಂಗ್ರಹಿಸಿ ಹುಬ್ಬಳ್ಳಿಯಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
'ಉಸಿರಾಟದ ಸಮಸ್ಯೆಯಾಗಿ ವೃದ್ಧ ಅಸುನೀಗಿದ್ದಾರೆ. ಇದನ್ನು ಶಂಕಿತ ಕೊರೊನಾದಿಂದ ಉಂಟಾದ ಸಾವು ಎಂದು ಪರಿಗಣಿಸಲಾಗಿದೆ. ಅವರ ಗಂಟಲು ಮಾದರಿಯ ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ' ಎಂದು ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.
ಕುಟುಂಬದವರಿಗೆ ಶವ ಹಸ್ತಾಂತರ ಮಾಡಿದ್ದು, ಕೋವಿಡ್ ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.