ADVERTISEMENT

ಬೆಳಗಾವಿ | ಪ್ರವಾಹ ಪರಿಸ್ಥಿತಿ ತಲೆದೋರಿದರೆ ಸಂತ್ರಸ್ತರನ್ನು ಸ್ಥಳಾಂತರಿಸಿ: ಡಿ.ಸಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 12:53 IST
Last Updated 24 ಜುಲೈ 2024, 12:53 IST
<div class="paragraphs"><p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ&nbsp;ಮೊಹಮ್ಮದ್ ರೋಷನ್ ಮಾತನಾಡಿದರು.</p></div>

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮೊಹಮ್ಮದ್ ರೋಷನ್ ಮಾತನಾಡಿದರು.

   

ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದರೆ ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲು ಮುಂಜಾಗ್ರತಾ ಕ್ರಮವಾಗಿ ಗುರುತಿಸಿದ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆ ಪರಿಶೀಲಿಸಬೇಕು. ತುರ್ತು ಸಂದರ್ಭ ಗ್ರಾಮಸ್ಥರನ್ನು ತಕ್ಷಣವೇ ಅಲ್ಲಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

‘ಪ್ರವಾಹ ನಿರ್ವಹಣೆಗಾಗಿ ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು. ಅಗತ್ಯಬಿದ್ದರೆ ಬಾಡಿಗೆ ಬೋಟ್‌ಗಳನ್ನು ಪಡೆಯಲು ಕ್ರಮ ವಹಿಸಬೇಕು’ ಎಂದ ಅವರು, ‘ಐದು ಬೋಟ್ ಖರೀದಿಸಿ, ಅವುಗಳ ಬಳಕೆಯ ಕುರಿತು ಅಗ್ನಿಶಾಮಕ ದಳದ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ತುರ್ತು ಸಂದರ್ಭ ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸರ್ಚ್ ಲೈಟ್‌ಗಳನ್ನು ಒದಗಿಸಲಾಗುವುದು’ ಎಂದರು.

‘ಮಂಗಾವತಿ, ಜುಗುಳ, ಶಿರಗುಪ್ಪಿ, ಕುಸನಾಳ, ಯಡೂರ, ಮಾಂಜರಿ, ತಂಗಡಗಿ, ಶಿನಾಳ, ಝಂಜರವಾಡ, ಸತ್ತಿ, ಸವದಿ, ಕೋಡ್ನಿ, ಭೋಜ, ಬಸನಾಳ, ಕೋಟನಾಳ, ಸಂಕೇಶ್ವರದ ನದಿಗಲ್ಲಿ, ಕುಂಬಾರ ಓಣಿ ಸೇರಿದಂತೆ ಪ್ರವಾಹದಿಂದ ಬಾಧಿತವಾಗಬಹುದಾದ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿತೀರದ ಗ್ರಾಮಗಳಲ್ಲಿ ತಹಶೀಲ್ದಾರರು, ನೋಡಲ್ ಅಧಿಕಾರಿಗಳು, ಅಗ್ನಿಶಾಮಕ ದಳದವರು, ಪೊಲೀಸ್ ಅಧಿಕಾರಿಗಳು ನಿಗಾ ವಹಿಸಬೇಕು. ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ‘ಪ್ರವಾಹದಿಂದ ಬಾಧಿತವಾಗಬಹುದಾದ ಗ್ರಾಮಗಳಲ್ಲಿನ ಗರ್ಭಿಣಿ‌ಯರು ಮತ್ತು ಹಿರಿಯ ನಾಗರಿಕರ ಮಾಹಿತಿ ಹೊಂದಿರಬೇಕು. ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಆಹಾರ ಪದಾರ್ಥಗಳ ದಾಸ್ತಾನು ಇರುವುದನ್ನು‌ ಖಚಿತಪಡಿಸಿಕೊಳ್ಳಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ‘ನದಿತೀರದ ಕೆಲವೆಡೆ ಮೊಸಳೆ ಕಂಡುಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಜನರು ನೀರಿಗೆ ಇಳಿಯದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಐಎಎಸ್ ಪ್ರೊಬೆಷನರಿ ಅಧಿಕಾರಿ ದಿನೇಶಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ ಇದ್ದರು.

ಭೂಕುಸಿತ: ಎಚ್ಚರ ವಹಿಸಿ

‘ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಅನೇಕ ಕಡೆ ದೊಡ್ಡ ಕಂದಕಗಳನ್ನು ಕೊರೆಯಲಾಗಿದೆ. ಅದರ ಬಳಿ ಕಾರ್ಮಿಕರ ವಸತಿ ಶೆಡ್, ಢಾಬಾ, ಸಣ್ಣ–ಪುಟ್ಟ ಅಂಗಡಿ ಇವೆ. ಭೂಕುಸಿತ ಉಂಟಾಗಿ ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಹಾಗಾಗಿ ತಕ್ಷಣವೇ ಅವುಗಳನ್ನು ತೆರವುಗೊಳಿಸಬೇಕು. ಬೆಳಗಾವಿ ನಗರದ ಚರಂಡಿಗಳನ್ನು ಸ್ವಚ್ಛಗೊಳಿಸಿ, ಮಳೆನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಪಾಶ್ಚಾಪುರ, ಹಗೇದಾಳ, ಬಗರನಾಳ, ಅಂಕಲಗಿ ಮತ್ತಿತರ ಕಡೆ ಬಳ್ಳಾರಿ ನಾಲೆಯಿಂದ ಉಂಟಾಗಬಹುದಾದ ಸಮಸ್ಯೆ ಅರಿತು, ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಮೊಹಮ್ಮದ್‌ ರೋಷನ್‌ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.