ಬೆಳಗಾವಿ: ‘ಸಚಿವ ಸ್ಥಾನ ಸಿಗದಿದ್ದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ನೀಡಿರುವ ಹೇಳಿಕೆಗೆ ಈಗಲೂ ಬದ್ಧವಿದ್ದೇನೆ. ನನಗೆ ಮುಖ್ಯಮಂತ್ರಿ ಕಚೇರಿಯಿಂದ ಈವರೆಗೂ ಕರೆ ಬಂದಿಲ್ಲ’ ಎಂದು ಸವದತ್ತಿ–ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ ತಿಳಿಸಿದರು. ಇದರೊಂದಿಗೆ, ಸಚಿವ ಸಂಪುಟ ರಚನೆಯ ಬೆನ್ನಲ್ಲೆ ಬಿಜೆಪಿಯಲ್ಲಿ ಬೆಳಗಾವಿಯಿಂದಲೇ ಬಂಡಾಯದ ಕಹಳೆ ಮೊಳಗುವ ಸಾಧ್ಯತೆ ನಿಚ್ಚಳವಾಗಿದೆ.
‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘2008ರಿಂದ ಸತತವಾಗಿ ಮೂರು ಬಾರಿ ಗೆದ್ದು ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸಲು ಶ್ರಮಿಸಿದ್ದೇನೆ. ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಸಚಿವ ಸ್ಥಾನ ನೀಡಬೇಕು ಎನ್ನುವುದು ನನ್ನ ಒತ್ತಾಯವಾಗಿತ್ತು. ಕ್ಷೇತ್ರದ ಜನರ ಬಯಕೆಯೂ ಅದೇ ಆಗಿದೆ’ ಎಂದು ತಿಳಿಸಿದರು.
‘ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದರಿಂದ ಹಿಂದೆ ಸರಿಯುವುದಿಲ್ಲ. ಆದರೆ, ಬುಧವಾರವೇ ರಾಜೀನಾಮೆ ನೀಡುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಮತ್ತು ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸುತ್ತೇನೆ. ಬಳಿಕ ಕ್ಷೇತ್ರದ ಮತದಾರರು, ಕಾರ್ಯಕರ್ತರು ಮತ್ತು ಹಿತೈಷಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.
ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಬಲಿಗರು ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.