ADVERTISEMENT

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದಿದ್ದು ಸರಿಯಲ್ಲ: ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 9:56 IST
Last Updated 2 ಏಪ್ರಿಲ್ 2021, 9:56 IST
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್    

ಬೆಳಗಾವಿ: ‘ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಹಿರಂಗವಾಗಿ ಪತ್ರ ಬರೆಯುವುದು, ಅದನ್ನು ರಾಜ್ಯಪಾಲರಿಗಾಗಲಿ ಅಥವಾ ಪಕ್ಷದ ಮೇಲಿನವರಿಗಾಗಲಿ ಕಳುಹಿಸುವಂಥದು ಆಗಬಾರದಿತ್ತು. ಏನಿದ್ದರೂ ಮುಖ್ಯಮಂತ್ರಿ ಜೊತೆಯೇ ಚರ್ಚಿಸಬೇಕಿತ್ತು. ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಬೇಕಿತ್ತು. ಇದೆಲ್ಲವೂ ನಾಲ್ಕು ಗೋಡೆಗಳ ಒಳಗೆ ಆಗಬೇಕಾಗಿತ್ತು’ ಎಂದು ಪ್ರತಿಕ್ರಿಯಿಸಿದರು.

‘ನಾವೆಲ್ಲವೂ ಬಿ.ಎಸ್. ಯಡಿಯೂರಪ್ಪ ನಾಯಕತ್ವದಲ್ಲೇ ಹೊರಟಿದ್ದೇವೆ’ ಎಂದರು.

ADVERTISEMENT

‘ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರವು, ಉಪ ಚುನಾವಣೆಗಳ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದರು.

‘ಉಪ ಚುನಾವಣೆ ಬಳಿಕ ರಾಜಕೀಯ ಬದಲಾವಣೆ ಆಗುತ್ತದೆ’ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಕಾಂಗ್ರೆಸ್‌ನವರು ಇದನ್ನೇ ಹೇಳಿಕೊಂಡು ಬಂದಿದ್ದಾರೆ. ಅವರಿಗೆ ಯಾವುದೇ ವಿಷಯವಿಲ್ಲ. ಏನೂ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.