ಬಿಜೆಪಿಯಿಂದ ಪತ್ರಿಕಾಗೋಷ್ಠಿ
ಬೆಳಗಾವಿ: 'ಅಥಣಿಯಲ್ಲಿ ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಶಾಸಕ ಲಕ್ಷ್ಮಣ ಸವದಿ, ಅವರ ಪುತ್ರ ಚಿದಾನಂದ ಹಾಗೂ ಬೆಂಬಲಿಗರನ್ನು ತಕ್ಷಣ ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿಯಿಂದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು' ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಹೇಳಿದರು.
ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಗುಂಡಾಗಿರಿ ಮಿತಿಮೀರಿದೆ. ಬಳ್ಳಾರಿ ಘಟನೆ ಬೆನ್ನಲ್ಲೆ, ಅಥಣಿಯಲ್ಲೂ ಕಾಂಗ್ರೆಸ್ ಶಾಸಕರಿಂದ ಹಲ್ಲೆಯಾಗಿದೆ.
ಅವರಿಗೆ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ. ಎಫ್ಐಆರ್ ಆದರೂ, ಶಾಸಕ ಸವದಿ ಬಂಧನವಾಗಿಲ್ಲ' ಎಂದು ದೂರಿದರು.
'ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಈಗ ಕಾಂಗ್ರೆಸ್ ಕಚೇರಿಗಳಾಗಿ ಪರಿವರ್ತನೆಯಾಗಿವೆ. ಪೊಲೀಸರು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ' ಎಂದು ಆರೋಪಿಸಿದರು.
ಮಾಜಿ ಶಾಸಕ ಸಂಜಯ ಪಾಟೀಲ, 'ಅಥಣಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ, ಆರೋಪಿಗಳ ವಿರುದ್ಧ ಕ್ರಮವಾಗಲೇಬೇಕು' ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.