ಬೆಳಗಾವಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಶಾಸಕಿ ಶಶಿಕಲಾ ಜೊಲ್ಲೆ, ‘ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಇದು ಅಕ್ಷಮ್ಯ ಅಪರಾಧ. ಪೊಲೀಸ್ ಇಲಾಖೆ ಮೇಲೆ ಸರ್ಕಾರದ ನಿಯಂತ್ರಣ ಇಲ್ಲದಿರುವುದಕ್ಕೆ ಈ ಘಟನೆಯೇ ಸಾಕ್ಷಿ’ ಎಂದು ಆರೋಪಿಸಿದರು.
ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷೆ ಸುಭಾಷ ಪಾಟೀಲ, ‘ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವುದಕ್ಕೆ ಪೊಲೀಸ್ ವ್ಯವಸ್ಥೆ ಇದೆಯೇ ಹೊರತು, ಗೂಂಡಾಗಿರಿ ಮಾಡಲು ಅಲ್ಲ’ ಎಂದು ದೂರಿದರು.
ಪಕ್ಷದ ಬೆಳಗಾವಿ ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅರವಿಂದ ಪಾಟೀಲ, ಮುಖಂಡರಾದ ಎಂ.ಬಿ.ಝಿರಲಿ, ಉಜ್ವಲಾ ಬಡವನಾಚೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.