ADVERTISEMENT

ನಿಷೇಧಾಜ್ಞೆ ನಡುವೆಯೂ ಬಿಜೆಪಿಯಿಂದ ಪ್ರತಿಭಟನೆ!

​ಪ್ರಜಾವಾಣಿ ವಾರ್ತೆ
Published 5 ಮೇ 2021, 10:50 IST
Last Updated 5 ಮೇ 2021, 10:50 IST
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ಕೋವಿಡ್ ಕರ್ಫ್ಯೂ ಹಾಗೂ ನಿಷೇಧಾಜ್ಞೆ ಜಾರಿಯಲ್ಲಿರುವ ನಡುವೆಯೂ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ಗ್ರಾಮೀಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ನಡೆಸಿದ್ದಾರೆ ಎನ್ನಲಾದ ಹಿಂಸಾಚಾರವನ್ನು ಅವರು ಖಂಡಿಸಿದರು. ಟಿಎಂಸಿ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ದೂರಿದರು.

‘ಅಲ್ಲಿ 48 ಗಂಟೆಗಳಲ್ಲಿ 10 ಜನ ಕಾರ್ಯಕರ್ತರ ಹತ್ಯೆಯಾಗಿದೆ. ನೂರಾರು ಮನೆಗಳು ಅಗ್ನಿಗೆ ಆಹುತಿಯಾಗಿವೆ. ಪಶ್ಚಿಮ ಬಂಗಾಳ ಇಂದು ಕಾಶ್ಮೀರದ ರೀತಿಯಲ್ಲಿ ಸಾಗುತ್ತಿದೆ. ಇದು ಖಂಡನೀಯ’ ಎಂದು ತಿಳಿಸಿದರು.

ADVERTISEMENT

ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮುಖಂಡರಾದ ಪಂಕಜ ಘಾಡಿ, ಉಮೇಶ ಪುರಿ, ಶಿವಾಜಿ ಸುಂಟಕರ, ಭಾಗ್ಯಶ್ರೀ ಕೊಕಿತಕರ, ಸ್ವಾತಿ ಜಗದಾಲೆ ಭಾಗವಹಿಸಿದ್ದರು.

‘ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆಗೆ ಅವಕಾಶವಿಲ್ಲ. ಬಿಜೆಪಿಯವರು ಪ್ರತಿಭಟನೆ ನಡೆಸಿದ್ದಕ್ಕೆ ಪ್ರಕರಣ ದಾಖಲಾಗಿಲ್ಲ’ ಎಂದು ಮಾರ್ಕೆಟ್‌ ಠಾಣೆ ಇನ್‌ಸ್ಪೆಕ್ಟರ್‌ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.