ADVERTISEMENT

ಪ್ರಜಾವಾಣಿ ವರದಿ ಪರಿಣಾಮ: ಮಹಾರಾಷ್ಟ್ರ, ಗೋವಾಕ್ಕೆ ಬಸ್‌ ಸೇರಿ ಎಲ್ಲ ವಾಹನ ಬಂದ್‌

ಕೊರೊನಾ: ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 12:19 IST
Last Updated 20 ಮಾರ್ಚ್ 2020, 12:19 IST
‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ
‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ   

ಬೆಳಗಾವಿ: ನಗರದಿಂದ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಗೆ ನಿರ್ಗಮಿಸುವ ಮತ್ತು ಬರುವ ಬಸ್‌ಗಳು ಸೇರಿದಂತೆ ಎಲ್ಲ ರೀತಿಯ ಪ್ರಯಾಣಿಕರ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

‘ಕೊರೊನಾ ವೈರಾಣು ಸೋಂಕು ಹರಡದಂತೆ ನೋಡಿಕೊಳ್ಳುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಚರ್ಚಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮ್ಯಾಕ್ಸಿಕ್ಯಾಬ್‌ (12+1), ಪ್ರಯಾಣಿಕರ ಭಾರಿ ವಾಹನಗಳಾದ ಕಾಂಟ್ರಾಕ್ಟ್‌ ಕ್ಯಾರೇಜ್, ಸ್ಟೇಜ್ ಕ್ಯಾರೇಜ್‌, ಅಖಿಲ ಭಾರತ ಪ್ರವಾಸಿ ಬಸ್‌ಗಳ (ಟೂರಿಸ್ಟ್‌, ಓಮ್ನಿ ಬಸ್‌ಗಳು) ಸಂಚಾರವನ್ನು ಮುಂದಿನ ಆದೇಶದವರೆಗೆ ನಿಷೇಧಿಸಿ ಆದೇಶಿಸಲಾಗಿದೆ’ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

‘ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು, ಎಸ್ಪಿ, ಆರ್‌ಟಿಒ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

‘ಜಿಲ್ಲಾಧಿಕಾರಿ ಆದೇಶದ ಮೇರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಬಸ್‌ಗಳ ಕಾರ್ಯಾಚರಣೆ ಬಂದ್ ಮಾಡಲಾಗಿದೆ’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪ ಮುಂಜಿ ತಿಳಿಸಿದರು.

ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ವೈರಾಣು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಅಲ್ಲಿಂದ ಇಲ್ಲಿಗೆ ಮತ್ತು ಇಲ್ಲಿಂದ ಅಲ್ಲಿಗೆ ಸಾರಿಗೆ ಬಸ್‌ಗಳು ಸೇರಿದಂತೆ ವಾಹನಗಳ ಸಂಚಾರ ನಿರಾತಂಕವಾಗಿ ಸಂಚರಿಸುತ್ತಿದ್ದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಶುಕ್ರವಾರ ವಿಶೇಷ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.