ADVERTISEMENT

ವಾಹನಗಳ ತಪಾಸಣೆಗೆ ಕಟ್ಟುನಿಟ್ಟಿನ ಸೂಚನೆ

ಚೆಕ್ ಪೋಸ್ಟ್, ಮತದಾನ ಕೇಂದ್ರ ಪರಿಶೀಲಿಸಿದ ಡಿ.ಸಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 10:09 IST
Last Updated 27 ಮಾರ್ಚ್ 2021, 10:09 IST
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಂತಿಬಸ್ತವಾಡ ಕ್ರಾಸ್‌ನಲ್ಲಿ ತೆರೆದಿರುವ ಚೆಕ್‌‍ಪೋಸ್ಟ್‌ಗೆ ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ಶನಿವಾರ ಭೇಟಿ ನೀಡಿ ಪರಿಶೀಲಿಸಿದರುಪ್ರಜಾವಾಣಿ ಚಿತ್ರ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಂತಿಬಸ್ತವಾಡ ಕ್ರಾಸ್‌ನಲ್ಲಿ ತೆರೆದಿರುವ ಚೆಕ್‌‍ಪೋಸ್ಟ್‌ಗೆ ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ಶನಿವಾರ ಭೇಟಿ ನೀಡಿ ಪರಿಶೀಲಿಸಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ, ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಅಂತರ ರಾಜ್ಯ ಗಡಿ ಭಾಗದಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಶನಿವಾರ ಪರಿಶೀಲಿಸಿದರು.

ಗೋವಾ ಹಾಗೂ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿದರು. ಅಲ್ಲಿನ ಸಿಬ್ಬಂದಿಯೊಂದಿಗೆ ಚರ್ಚಿಸಿದ ಅವರು, ‘ಚೆಕ್‌ಪೋಸ್ಟ್ ಮೂಲಕ ಸಾಗುವ ಪ್ರತಿಯೊಂದು ವಾಹನವನ್ನೂ ಸಮರ್ಪಕವಾಗಿ ಪರಿಶೀಲನೆ ನಡೆಸಬೇಕು’ ಎಂದು ಸೂಚಿಸಿದರು.

‘ಪರಿಶೀಲನೆ ವೇಳೆ ಅಕ್ರಮ ಹಣ, ಮದ್ಯ ಮತ್ತಿತರ ವಸ್ತುಗಳು ವಶಪಡಿಸಿಕೊಂಡಲ್ಲಿ ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವ ಜೊತೆಗೆ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಬಾಚಿ, ಬೆಕ್ಕಿನಕೇರಿ, ರಾಕಸಕೊಪ್ಪ, ಸಂತಿಬಸ್ತವಾಡ ಕ್ರಾಸ್, ದೇಸೂರ ಕ್ರಾಸ್, ಖಾನಾಪುರ ರಸ್ತೆಯ ಕೆಲವು ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿದರು.

ಇದೇ ವೇಳೆ ಕೆಲವು ಮತದಾನ ಕೇಂದ್ರ (ಮತಗಟ್ಟೆ)ಗಳಿಗೆ ಭೇಟಿ ನೀಡಿ ಮೂಲಸೌಕರ್ಯ ಪರಿಶೀಲಿಸಿದರು. ‘ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಸೇರಿದಂತೆ ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು’ ಎಂದು ಸೂಚಿಸಿದರು.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶಿವನಗೌಡ ಪಾಟೀಲ, ತಹಶೀಲ್ದಾರ್‌ ಆರ್‌.ಕೆ. ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.