ಸತೀಶ ಜಾರಕಿಹೊಳಿ
ಬೆಳಗಾವಿ: ‘ರಾಜ್ಯದಾದ್ಯಂತ ಎಲ್ಲ ಬಸ್ ನಿಲ್ದಾಣಗಳು ಮತ್ತು ದೂರದ ಊರುಗಳಿಗೆ ತೆರಳುವ ಬಸ್‌ಗಳಲ್ಲಿ ಭದ್ರತಾ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿ ಸೋಮವಾರ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಎನ್‌ಡಬ್ಲ್ಯುಕೆಆರ್‌ಟಿಸಿ) ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಬೆಂಗಳೂರಿನ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ. ಇದೇ ಮಾದರಿಯಲ್ಲಿ ಎಲ್ಲ ನಿಲ್ದಾಣಗಳಲ್ಲಿ ಅಳವಡಿಸುವ ನಿಟ್ಟಿನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು’ ಎಂದರು.
‘ಯಲ್ಲಮ್ಮನಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಿದರೂ ಸಭೆಗೆ ನನ್ನನ್ನು ಆಹ್ವಾನಿಸುತ್ತಿಲ್ಲ’ ಎಂಬ ಸಂಸದ ಜಗದೀಶ ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ, ‘ಜಗದೀಶ ಶೆಟ್ಟರ್ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಕಾರದ ಸದಸ್ಯರಲ್ಲ. ಹಾಗಾಗಿ ಸಭೆಗೆ ಆಹ್ವಾನಿಸುತ್ತಿಲ್ಲ’ ಎಂದರು.
‘ಎನ್‌ಡಬ್ಲ್ಯುಕೆಆರ್‌ಟಿಸಿಯಲ್ಲಿ 300 ಬಸ್‌ಗಳ ಖರೀದಿಗೆ ಅನುಮತಿ ಸಿಕ್ಕಿದೆ. ಹಂತ ಹಂತವಾಗಿ ಬಸ್‌ಗಳು ಸಿದ್ಧವಾಗಿ ಬಂದ ನಂತರ, ಬೇಡಿಕೆ ಇರುವ ಘಟಕಗಳಿಗೆ ಒದಗಿಸುತ್ತೇವೆ’ ಎಂದು ಎನ್‌ಡಬ್ಲ್ಯುಕೆಆರ್‌ಟಿಸಿ ಅಧ್ಯಕ್ಷ ಭರಮಗೌಡ(ರಾಜು) ಕಾಗೆ ಹೇಳಿದರು.
‘ಈ ಹಿಂದೆ 2,814 ಸಿಬ್ಬಂದಿ ನೇಮಕಕ್ಕೆ ಆದೇಶವಾಗಿತ್ತು. ಈ ಪೈಕಿ 1 ಸಾವಿರ ಸಿಬ್ಬಂದಿ ನೇಮಕಕ್ಕೆ ಆರ್ಥಿಕ ಇಲಾಖೆ ಈಗ ಅನುಮತಿ ಕೊಟ್ಟಿದೆ. ಉಳಿದ ಹುದ್ದೆ ತುಂಬಲು ಕ್ರಮ ವಹಿಸುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.