ADVERTISEMENT

ಚಿಕ್ಕೋಡಿ | ವಸತಿ ನಿಲಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಆರೋಗ್ಯದಲ್ಲಿ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2025, 3:09 IST
Last Updated 14 ಸೆಪ್ಟೆಂಬರ್ 2025, 3:09 IST
ಚಿಕ್ಕೋಡಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಸಿಂಧೆ ವಿಚಾರಿಸಿದರು
ಚಿಕ್ಕೋಡಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಸಿಂಧೆ ವಿಚಾರಿಸಿದರು   

ಚಿಕ್ಕೋಡಿ: ತಾಲ್ಲೂಕಿನ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 93 ವಿದ್ಯಾರ್ಥಿಗಳ ಪೈಕಿ 40 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಶನಿವಾರ ಅವರನ್ನು ಮನೆಗೆ ಕಳುಹಿಸಲಾಗಿದೆ.

ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ 38 ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 15 ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಶುಕ್ರವಾರ 11 ಹಾಗೂ ಶನಿವಾರ 5 ವಿದ್ಯಾರ್ಥಿಗಳು ಸೇರಿದಂತೆ ತೀವ್ರ ಅಸ್ವಸ್ಥರಾಗಿದ್ದ 16 ವಿದ್ಯಾರ್ಥಿಗಳನ್ನು ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಸಿಂಧೆ, ಹಿರೇಕೋಡಿಯ ಮೊರಾರ್ಜಿ ವಸತಿ ಶಾಲೆಗೆ ಶನಿವಾರ ಭೇಟಿ ನೀಡಿ ಅಡುಗೆ ಕೋಣೆಯನ್ನು ಪರಿಶೀಲಿಸಿ, ಸಿಬ್ಬಂದಿಯನ್ನು ವಿಚಾರಿಸಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ನಂತರದಲ್ಲಿ ವಿದ್ಯಾರ್ಥಿಗಳು ದಾಖಲಾಗಿದ್ದ ತಾಲ್ಲೂಕು ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ತಹಶೀಲ್ದಾರ ರಾಜೇಶ ಬುರ್ಲಿ, ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಗಡದ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಕುಮಾರ ಬಾಗಾಯಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ರವೀಂದ್ರ ಬಂಗಾರೆಪ್ಪನವರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ ಎನ್ ವಣ್ಣೂರ, ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವೆ ಇತರರು ಇದ್ದರು.

ವಸತಿ ಶಾಲೆಯಲ್ಲಿ ದೋಷಪೂರಿತ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದರಿಂದ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯ ಖಂಡಿಸಿ ಹಿರೇಕೋಡಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಸಂಜೀವ ಕಾಂಬಳೆ ನೇತೃತ್ವದಲ್ಲಿ ಶಾಲೆಯ ಪ್ರಾಚಾರ್ಯರಿಗೆ ಮನವಿ ಸಲ್ಲಿಸಲಾಯಿತು.

ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಸಿಂಧೆ ಭೇಟಿ ನೀಡಿ ಅಡುಗೆ ಕೋಣೆ ಪರಿಶೀಲಿಸಿದರು.
ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ಘಟನೆ ಖಂಡಿಸಿ ಹಿರೇಕೋಡಿ ಗ್ರಾಮ ಘಟಕದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶಾಲೆಯ ಪ್ರಾಚಾರ್ಯರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.