ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳ ಸಾರ್ವಜನಿಕರ ಸಮಸ್ಯೆಗಳನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಆಲಿಸಿದರು. ಪಟ್ಟಣದ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಂಸದೆ ಪ್ರಿಯಂಕಾ ಜಾರಕಿಹೊಳಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಒಂದಿಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಆಯಾ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಜನರ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ, ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯವನ್ನು ಪ್ರಾಮಾಣಿಕತೆಯಿಂದ ಮಾಡಲಾಗುತ್ತಿದೆ. ಕಾರ್ಯಕರ್ತರು ತಮ್ಮ ಸಮಸ್ಯೆಗಳು ಇದ್ದಲ್ಲಿ ನಮ್ಮ ಕಚೇರಿಗೆ ಬಂದು ಬಗೆಹರಿಸಿಕೊಳ್ಳಬೇಕು. ಯಾವುದೇ ಇಲಾಖೆಯ ಸಮಸ್ಯೆ ಇದ್ದರೂ ಸಹ ನಮ್ಮ ಗಮನಕ್ಕೆ ತಂದು ಅದನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.
ಸರ್ಕಾರದಿಂದ ಅನುದಾನ ತರುವ ಮೂಲಕ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೂ ಸದಾ ಶ್ರಮಿಸಲಾಗುವುದು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರತಿ ಪ್ರದೇಶಕ್ಕೂ ಖುದ್ದು ಅಧಿಕಾರಿಗಳೊಂದಿಗೆ ಭೇಟಿ ನೀಡುತ್ತಿದ್ದೇನೆ. ಈ ವೇಳೆ ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಭವಿಷ್ಯದಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಕೆಲಸಗಳನ್ನು ಸ್ಥಳದಲ್ಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸುತ್ತಿದ್ದೇನೆ. ಇದರಿಂದ ಶಾಶ್ವತವಾಗಿ ಉಳಿಯುವಂತಹ ಕೆಲಸ ಮಾಡಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಕೋರೆ, ಪುರಸಭೆ ಸದಸ್ಯ ಶಾಮ ರೇವಡೆ, ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ, ಕೆಪಿಸಿಸಿ ಸದಸ್ಯ ರಾಜಕುಮಾರ ಕೋಟಗಿ, ಗಣೇಶ ಮೋಹಿತೆ, ಕರೋಶಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸಂಜು ಕಾಂಬಳೆ, ಶಿವಪ್ಪಾ ಪೋಗತ್ಯಾನಟ್ಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.