ಬೆಳಗಾವಿ: ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಈವರೆಗೆ 44,202 ಮನೆಗಳಿಗೆ ಒಟ್ಟು ₹861 ಕೋಟಿ ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ಬಾಕಿ ಪರಿಹಾರಕ್ಕೆ ರೈತರು ಹಾಗೂ ನೆರೆ ಸಂತ್ರಸ್ತರು ಬೇಡಿಕೆ ಇಟ್ಟಿದ್ದಾರೆ. ಈಚೆಗೆ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗಿದೆ. ಮುಂದಿನ ವಾರ ಮತ್ತೊಂದು ಸಭೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು.
ಬೆಳಗಾವಿಗೆ ಸಕ್ಕರೆ ಆಯುಕ್ತರ ಕಚೇರಿ ಸ್ಥಳಾಂತರ ಆಗುತ್ತದೆ. ಅ. 3ರಿಂದ ಇಲ್ಲಿ ಕೆಲಸ ಪ್ರಾರಂಭಿಸಲಿದೆ. ಮತ್ತಷ್ಟು ಕಚೇರಿಗಳ ಸ್ಥಳಾಂತರ ಪ್ರಕ್ರಿಯೆ ನಡೆದಿದೆ. ಸಾಧ್ಯ ಇರುವ ಕಚೇರಿಗಳನ್ನು ಇಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.
ರೈತರ ಕಬ್ಬಿನ ಬಾಕಿ ಬಿಲ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಾಕಿ ಕೊಡಿಸುವ ಕುರಿತು ಕ್ರಮ ವಹಿಸಲಾಗುವುದು. ಈ ನಿಟ್ಟಿನಲ್ಲಿ ರೈತ ಮುಖಂಡರ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ. ಈ ವಿಷಯವಾಗಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದರು.
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಇತ್ತೀಚೆಗಷ್ಟೆ ಜನರು ಕೋವಿಡ್ ಪರಿಸ್ಥಿತಿಯಿಂದ ಹೊರಗೆ ಬಂದಿದ್ದಾರೆ. ಆರ್ಥಿಕ ಚಟುವಟಿಕೆಗಳು ಶುರುವಾಗಿವೆ. ಈಗ ಬಂದ್ ನಡೆಸಿದರೆ ರೈತರು ಹಾಗೂ ವ್ಯಾಪಾರಿಗಳಿಗೆ ತೊಂದರೆ ಆಗುತ್ತದೆ. ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ. ಹೀಗಾಗಿ ರೈತ ಸಂಘಟನೆ ಗಳು ಸಹಕಾರ ಮಾಡಬೇಕು. ಜನರು ಆರ್ಥಿಕ ಸಂಕಷ್ಟದಿಂದ ಹೊರಬರಲು ಅನುವು ಮಾಡಿಕೊಡಬೇಕು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.