ADVERTISEMENT

ಸ್ಮಾರ್ಟ್‌ ಸಿಟಿ ಕಾಮಗಾರಿ ವೇಗ ಹೆಚ್ಚಬೇಕು: ಬಿ.ಎಸ್. ಯಡಿಯೂರಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 12:24 IST
Last Updated 29 ಜನವರಿ 2020, 12:24 IST
ಬೆಳಗಾವಿಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ನಿರ್ಮಿಸಿರುವ ಕಮಾಂಡ್ ಅಂಡ್ ಕಂಟ್ರೋಲ್‌ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಉದ್ಘಾಟಿಸಿದರು
ಬೆಳಗಾವಿಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ನಿರ್ಮಿಸಿರುವ ಕಮಾಂಡ್ ಅಂಡ್ ಕಂಟ್ರೋಲ್‌ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಉದ್ಘಾಟಿಸಿದರು   

ಬೆಳಗಾವಿ: ‘ನಗರದಲ್ಲಿ ಸ್ಮಾರ್ಟ್ ಸಿಟಿ‌ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು. ಅಂತೆಯೇ ಗುಣಮಟ್ಟವನ್ನೂ ಕಾಪಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್‌ ಅನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ನಗರದ ಜನರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ವಿನೂತನ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದರು.

ADVERTISEMENT

ಕೇಂದ್ರದ ಕಾರ್ಯವೈಖರಿಯ ಬಗ್ಗೆ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಅಂತೆಯೇ ನಗರಪಾಲಿಕೆ ಕಾಮಗಾರಿಗಳ ಕುರಿತು ಆಯುಕ್ತ ಕೆ.ಎಚ್. ಜಗದೀಶ ವಿವರಿಸಿದರು.

ಇದೇ ವೇಳೆ, ನಗರಪಾಲಿಕೆಯಿಂದ ಅಶೋಕ‌ ನಗರದಲ್ಲಿ ನಿರ್ಮಿಸಿರುವ ಈಜುಕೊಳ ಹಾಗೂ ವ್ಯಾಯಾಮಶಾಲೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಭವನ (ಕಚೇರಿ ಸಂಕೀರ್ಣ) ಮತ್ತು ಇಂಗ್ಲಿಷ್‌ ಮಾಧ್ಯಮ ಶಾಲೆಯನ್ನು ಮುಖ್ಯಮಂತ್ರಿ ಉದ್ಘಾಟಿಸಿದರು.

ಬೆಳಗಾವಿ ನಾಗರಿಕ ಸೇವಾ ಅಪ್ಲಿಕೇಷನ್ ಅನ್ನು ಸಾರ್ವಜನಿಕ ಬಳಕೆಗೆ ಬಿಡುಗಡೆ ಮಾಡಿದರು. ಇದರಲ್ಲಿ ಸಾರ್ವಜನಿಕ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್‌ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅಭಯ ಪಾಟೀಲ, ದುರ್ಯೋಧನ ಐಹೊಳೆ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.