
ಬೆಳಗಾವಿ: 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ನರೇಗಾ) ಬದಲಿಗೆ, ವಿಕಸಿತ ಭಾರತ– ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ–ಜಿ ರಾಮ್ ಜಿ) ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದನ್ನು ವಿರೋಧಿಸಿ, ಜನವರಿ 11ರಂದು ರಾಜ್ಯದಾದ್ಯಂತ ಎಲ್ಲ ಕಾಂಗ್ರೆಸ್ ಕಚೇರಿಗಳ ಮುಂದೆ ಒಂದು ದಿನದ ಸಾಂಕೇತಿಕ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹ ಮಾಡುತ್ತೇವೆ' ಎಂದು ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ಹೇಳಿದರು.
ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೊಸ ಕಾಯ್ದೆ ರದ್ದುಪಡಿಸುವವರೆಗೆ ನಾವು ಹೋರಾಟ ಮಾಡುತ್ತೇವೆ. ನ್ಯಾಯಾಲಯದ ಮೊರೆ ಹೋಗುವ ಜತೆಗೆ, ಜ.12ರಿಂದ 29ರವರೆಗೆ ದೇಶದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದ ಜನಸಂಪರ್ಕ ಕಾರ್ಯಕ್ರಮ ಆಯೋಜಿಸುತ್ತೇವೆ. ಜ.31ರಿಂದ ಫೆ.6ರವರೆಗೆ ಜಿಲ್ಲಾಮಟ್ಟದಲ್ಲಿ ಪ್ರತಿಭಟನೆ ಮತ್ತು ಫೆ.16ರಿಂದ 24ರವರೆಗೆ ವಿಭಾಗೀಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು. ರಾಜ್ಯದಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಕಚೇರಿಗಳ ಬಳಿ ಪ್ರತಿಭಟನೆ ನಡೆಸುತ್ತೇವೆ’ ಎಂದರು.
‘ನರೇಗಾ ಯೋಜನೆಯಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸಬಹುದಿತ್ತು. ಆದರೆ, ಹೊಸ ಕಾಯ್ದೆ ಜಾರಿಗೆ ತರುವ ಅಗತ್ಯವಿರಲಿಲ್ಲ. ಕೇಂದ್ರವು ರೈತ ವಿರೋಧಿ ಕಾಯ್ದೆ ಜಾರಿಗೆ ತಂದಾಗ ನಡೆದಿದ್ದ ಪ್ರತಿಭಟನೆಗಳ ಮಾದರಿಯಲ್ಲೇ, ಈ ಹೋರಾಟವೂ ನಡೆಯುತ್ತದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.