ADVERTISEMENT

ಪಾಲಿಕೆ ಚುನಾವಣೆ; ಚಿಹ್ನೆ ಮೇಲೆ ಸ್ಪರ್ಧೆ: ವರಿಷ್ಠರ ಅಂಗಳಕ್ಕೆ

ಕಾಂಗ್ರೆಸ್: ಎಂ.ಬಿ. ಪಾಟೀಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 6:23 IST
Last Updated 17 ಆಗಸ್ಟ್ 2021, 6:23 IST
ಬೆಳಗಾವಿಯಲ್ಲಿ ಮಹಾನಗರಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಎಂ.ಬಿ. ಪಾಟೀಲ ಮಾತನಾಡಿದರು
ಬೆಳಗಾವಿಯಲ್ಲಿ ಮಹಾನಗರಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಎಂ.ಬಿ. ಪಾಟೀಲ ಮಾತನಾಡಿದರು   

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಸದಸ್ಯ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಎರಡು ಗಂಟೆಗಳವರೆಗೆ ಸೋಮವಾರ ಸಭೆ ನಡೆಸಲಾಯಿತು.

ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಮಹಾನಗರ ಪಾಲಿಕೆ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಯಿತು. ಈ ವಿಷಯಕ್ಕೆ ಪರ–ವಿರೋಧ ಅಭಿಪ್ರಾಯ ವ್ಯಕ್ತವಾದವು. ಮಾಜಿ ಶಾಸಕರು, ಮುಖಂಡರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಎಂ.ಬಿ. ಪಾಟೀಲ, ‘ಹಲವು ವಿಷಯಗಳ ಜೊತೆ, ಮಹಾನಗರ ಪಾಲಿಕೆ ಚುನಾವಣೆಯನ್ನು ಪಕ್ಷದ ಚಿಹ್ನೆ ಮೇಲೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಯಿತು. ಈಗಾಗಲೇ ಪಾಲಿಕೆ ಚುನಾವಣೆ ಸ್ಪರ್ಧಿಸಲು ಆಕಾಂಕ್ಷಿಗಳಿಂದ ಟಿಕೆಟ್‌ಗಾಗಿ 120 ಅರ್ಜಿಗಳು ಬಂದಿವೆ’ ಎಂದು ತಿಳಿಸಿದರು.

ADVERTISEMENT

‘ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಸುವುದಕ್ಕೆ ಸಾಧಕ- ಬಾಧಕಗಳ ಚರ್ಚೆಯಾಗಿದೆ. ಸರ್ಕಾರದ ವೈಫಲ್ಯ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್, ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಆರ್ಥಿಕ ಮಟ್ಟ ಕುಸಿತ ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೋರಾಟ ನಡೆಸಿ, ವಾಸ್ತವವನ್ನು ಜನರ ಮುಂದಿಡಲು ಚರ್ಚಿಸಲಾಗಿದೆ’ ಎಂದರು.

‘ಚರ್ಚಿಸಲಾದ ವಿಷಯಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಮುಂದಿಡಲಾಗುವುದು. ಚಿಹ್ನೆ ಮೇಲೆ ಚುನಾವಣೆ ನಡೆಸುವುದೋ, ಬೇಡವೋ ಎನ್ನುವುದರ ಬಗ್ಗೆ ಅಲ್ಲಿ ತೀರ್ಮಾನ ತೆಗೆದುಕೊಳ್ಳುತ್ತದೆ’ ಎಂದು ಹೇಳಿದರು.

ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ, ನಾಸೀರ್ ಹುಸೇನ್, ಮುಖಂಡ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಮುಖಂಡರಾದ ಫಿರೋಜ್‌ ಸೇಠ್, ವೀರಕುಮಾರ ಪಾಟೀಲ, ಎಸ್.ಬಿ. ಘಾಟಗೆ, ರಾಜು ಸೇಠ್, ರಾಜೇಂದ್ರ ಪಾಟೀಲ, ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ಗ್ರಾಮೀಣ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ ಹನುಮನ್ನವರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.