ADVERTISEMENT

ಸಾಮೂಹಿಕ ಅತ್ಯಾಚಾರ: ಕಠಿಣ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 11:06 IST
Last Updated 7 ಅಕ್ಟೋಬರ್ 2020, 11:06 IST
ಉತ್ತರ ಪ್ರದೇಶದ ಹಾಥರಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಿಳಾ ಜಿಲ್ಲಾ ಸಮಿತಿಯವರು ಬುಧವಾರ ಪ್ರತಿಭಟನೆ ನಡೆಸಿದರು
ಉತ್ತರ ಪ್ರದೇಶದ ಹಾಥರಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಿಳಾ ಜಿಲ್ಲಾ ಸಮಿತಿಯವರು ಬುಧವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಮತ್ತು ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಮಹಿಳಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನೇತೃತ್ವ ವಹಿಸಿದ್ದ ಜಯಶ್ರೀ ಮಾಳಗಿ ಮಾತನಾಡಿ, ‘ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂಪೂರ್ಣ ವಿಫಲವಾಗಿದ್ದಾರೆ. ಹೀಗಾಗಿ, ಅಲ್ಲಿನ ಮಹಿಳೆಯರು ಭಯಭೀತರಾಗಿದ್ದಾರೆ. ಸಂತ್ರಸ್ತೆಯ ಅಂತಿಮ ದರ್ಶನಕ್ಕೆ ಮತ್ತು ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದವರಿಗೆ ಅವಕಾಶ ನೀಡದೆ ರಾತ್ರೋರಾತ್ರಿ ಶವವನ್ನು ಸುಟ್ಟು ಹಾಕಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂತ್ರಸ್ತೆಯ ಕುಟುಂಬದವರಿಗೆ ಧೈರ್ಯ ಹೇಳಲು ತೆರಳುತ್ತಿದ್ದ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮೊದಲಾದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದು ಖಂಡನೀಯ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಆ ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಅಶ್ವಿನಿ ನಾಯಕವಾಡಿ, ಆಯಿಷಾ ಎಂ. ಸನದಿ, ಅಂಜಲಿ ಪಾಟೀಲ, ರಾಧಾ ಕಿತ್ತೂರು, ರೋಹಿಣಿ, ಗಾಯತ್ರಿ ಪಾಟೀಲ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.