ADVERTISEMENT

ದೆಹಲಿಯಲ್ಲಿ ಪಾಳೆಯಗಾರ, ಕರ್ನಾಟಕದಲ್ಲಿ ಮಾಂಡಲಿಕ: ಸಿದ್ದರಾಮಯ್ಯ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 6:30 IST
Last Updated 10 ಏಪ್ರಿಲ್ 2021, 6:30 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ನಗರಗಳಲ್ಲಿ ರಾತ್ರಿ ಕರ್ಫ್ಯೂ ಹೇರಲು ರಾಜ್ಯ ಬಿಜೆಪಿ ಸರ್ಕಾರ ಕೈಗೊಂಡಿರುವ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯಷ್ಟೇ ಬಾಲಿಷ ಕ್ರಮ. ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

‘ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ. ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಮುಖ್ಯಮಂತ್ರಿ ಹೊಂದಿದ್ದರೆ, ಮೊದಲು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

‘ಕೋವಿಡ್ ಲಸಿಕೆ ಆರಂಭಿಸಿ 80 ದಿನಗಳು ಕಳೆದರೂ ಕೇವಲ ಶೇ 1ರಷ್ಟು ಜನರಿಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ಲಸಿಕೆ ಕೊರತೆಯ ದೂರು ಕೇಳಿಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ’ ಎಂದೂ ಸಲಹೆ ನೀಡಿದ್ದಾರೆ

‘ದೇಶದ ಪ್ರಧಾನಿಯ ಅಂಧಾ ದರ್ಬಾರ್‌ನಿಂದ ರಾಜ್ಯದ ಮುಖ್ಯಮಂತ್ರಿ ಸ್ಫೂರ್ತಿ ಪಡೆದರೆ, ಮುಖ್ಯಮಂತ್ರಿಯಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ನೀವು ಸ್ವಲ್ಪ ಬುದ್ದಿ ಕಲಿಯಿರಿ, ಅವರಿಗೂ ಸ್ವಲ್ಪ‌ ಬುದ್ದಿ ಹೇಳಿ’ ಎಂದೂ ಸಿದ್ದರಾಮಯ್ಯ ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.