ಮೂಡಲಗಿ: ‘ಭ್ರಷ್ಟಾಚಾರವು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹಾಳುಮಾಡುತ್ತಿರುವ ಗಂಭೀರ ಪಿಡುಗಾಗಿದ್ದು, ಸಾರ್ವಜನಿಕರು ಭ್ರಷ್ಟಾಚಾರಕ್ಕೆ ಉತ್ತೇಜನ ನೀಡಬಾರದು’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಹೇಳಿದರು.
ಅವರು ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಭ್ರಷ್ಟಾಚಾರ ವಿರೋಧಿ ಅರಿವು ಸಪ್ತಾಹ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಪೂರ್ವಭಾವಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸರ್ಕಾರಗಳ ನೀತಿ ಧೋರಣೆಯನ್ನು ರೂಪಿಸುವಲ್ಲಿ ಸಮೀಕ್ಷೆಗಳ ಪಾತ್ರ ಮಹತ್ವದ್ದಾಗಿದೆ. ಎಲ್ಲ ನಾಗರಿಕರು ಸಂಪೂರ್ಣವಾದ ಮಾಹಿತಿಯನ್ನು ಒದಗಿಸುವ ಮೂಲಕ ಸಮೀಕ್ಷೆಯನ್ನು ಯಶಸ್ವಿಯಾಗಿಸಲು ಸಹಕರಿಸಬೇಕು ಎಂದರು.
ಕಲ್ಲೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಿದಾನಂದ ಮುಗಳಖೋಡ ಮಾತನಾಡಿ, ವಿದ್ಯಾರ್ಥಿಗಳು ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಸುರೇಶ ಹನಗಂಡಿ ಅಧ್ಯಕ್ಷತೆ ವಹಿಸಿದ್ದರು.
ರಾಧಿಕಾ ಕರೆವ್ವಗೋಳ, ಡಿ.ಎಸ್. ಹುಗ್ಗಿ, ಕೆ.ಎಸ್. ಪರವ್ವಗೋಳ, ಎನ್‌ಎಸ್‌ಎಸ್ ಯೋಜನಾಧಿಕಾರಿ ಶಂಕರ ನಿಂಗನೂರ, ಮಹಾವಿದ್ಯಾಲಯದ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.