ADVERTISEMENT

ಬೆಳಗಾವಿಯಲ್ಲೂ ನಗರ ಪ್ರದೇಶಗಳಲ್ಲಿ ಮಾರ್ಷಲ್‌ಗಳ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 10:12 IST
Last Updated 9 ಏಪ್ರಿಲ್ 2021, 10:12 IST

ಬೆಳಗಾವಿ: ‘ಜಿಲ್ಲೆಯ ಎಲ್ಲ ನಗರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರು ಮತ್ತು ಕೋವಿಡ್–19 ಮಾರ್ಗಸೂಚಿ ಉಲ್ಲಂಘಿಸುವವರನ್ನು ಗುರುತಿಸಿ ದಂಡ ವಿಧಿಸಲು ಅನುಕೂಲ ಆಗುವಂತೆ ಬೆಂಗಳೂರು ನಗರದ ಮಾದರಿಯಲ್ಲಿ ಮಾರ್ಷಲ್‌ಗಳನ್ನು ನೇಮಿಸಿಕೊಂಡು ನಿಯೋಜಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.

‘ಕೋವಿಡ್ ಹರಡುವುದನ್ನು ತಡೆಗಟ್ಟುವ ಉದ್ಧೇಶದಿಂದ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಜಿಲ್ಲೆಯ ನಗರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ಸಂಚರಿಸುವವರಿಗೆ ದಂಡ ವಿಧಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗುವುದು. ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವ ಕುರಿತು ಮೂರು ದಿನಗಳವರೆಗೆ ಜಾಗೃತಿ ಮೂಡಿಸಲಾಗುವುದು. ಇದಾದ ಬಳಿಕವೂ ಮಾರ್ಗಸೂಚಿ ಉಲ್ಲಂಘಿಸುವವರಿಗೆ ದಂಡ ವಿಧಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ದಂಡ ವಿಧಿಸುವ ಜೊತೆಗೆ, ಮಾಸ್ಕ್‌ಗಳನ್ನು ಕೂಡ ನೀಡಲಾಗುವುದು. ಅದನ್ನು ಅವರೇ ಖರೀದಿಸಬೇಕಾಗುತ್ತದೆ. ಇದಕ್ಕಾಗಿ ಗೃಹರಕ್ಷಕದ ದಳದ ಸದಸ್ಯರನ್ನು ಬಳಸಿಕೊಳ್ಳಲಾಗುವುದು’ ಎಂದಿದ್ದಾರೆ.

ADVERTISEMENT

‘ನಗರ ಪ್ರದೇಶಗಳಲ್ಲಿ ಹೆಚ್ಚು ಜನಸಂದಣಿ ಕಂಡುಬರುವುದರಿಂದ ಕೋವಿಡ್ ಹರಡುವಿಕೆ ಸಾಧ್ಯತೆ ಜಾಸ್ತಿ ಇರುತ್ತದೆ. ಗ್ರಾಮೀಣ ಜನರು ನಗರ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆದ್ದರಿಂದ ಆರಂಭಿಕ ಹಂತದಲ್ಲಿ ಎಲ್ಲ ನಗರ ಪ್ರದೇಶಗಳಲ್ಲಿ ದಂಡ ಪ್ರಕ್ರಿಯೆ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿ ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.