ADVERTISEMENT

ಅಮಿತ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 15:21 IST
Last Updated 18 ಜನವರಿ 2021, 15:21 IST
ಬೆಳಗಾವಿಯಲ್ಲಿ ಕೋವಿಡ್–19 ನಿಯಮಾವಳಿ ಉಲ್ಲಂಘಿಸಿ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
ಬೆಳಗಾವಿಯಲ್ಲಿ ಕೋವಿಡ್–19 ನಿಯಮಾವಳಿ ಉಲ್ಲಂಘಿಸಿ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು   

ಬೆಳಗಾವಿ: ‘ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ, ಸಚಿವರು, ಲೋಕಸಭಾ ಸದಸ್ಯರು, ಬಿಜೆಪಿ ಪದಾಧಿಕಾರಿಗಳು ಮತ್ತು ಆಯೋಜಕರ ವಿರುದ್ಧ ಕೋವಿಡ್–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಷ್ಟ್ರೀಯ ವಿಪತ್ತು ನಿಯಂತ್ರಣ ಕಾಯ್ದೆಯಲ್ಲಿ ಎಫ್‌ಐಆರ್‌ ದಾಖಲಿಸಬೇಕು’ ಎಂದು ಆಗ್ರಹಿಸಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ ನಿಯಮಗಳನ್ನು ಪಾಲಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಸರ್ಕಾರ ನಡೆಸುತ್ತಿರುವವರು, ಜನಸಾಮಾನ್ಯರು ಎಲ್ಲರಿಗೂ ಕಾನೂನು ಒಂದೇ ಆಗಿದೆ. ಆದರೆ, ಸಾರ್ವಜನಿಕರ ವಿರೋಧದ ನಡುವೆಯೂ ಬಿಜೆಪಿಯವರು ಆಡಳಿತ ಯಂತ್ರ ದುರುಪಯೋಗಿ ಪಡಿಸಿಕೊಂಡು ಸಮಾವೇಶ ನಡೆಸಿದ್ದಾರೆ. ಈ ಮೂಲಕ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಸಮಾವೇಶಕ್ಕೆ ಅನುಮತಿ ನೀಡುವಾಗ ಜಿಲ್ಲಾಡಳಿತವು ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. 100ಕ್ಕಿಂತ ಹೆಚ್ಚಿನ ಜನರು ಒಂದು ಜಾಗದಲ್ಲಿ ಸೇರಬಾರದು ಎಂಬ ನಿಯಮವಿದ್ದರೂ ಒಂದೂವರೆ ಲಕ್ಷ ಸೇರಿಸಲಾಗಿದೆ. ಸುರಕ್ಷಿತ ಅಂತರವನ್ನು ಕಾಪಾಡಿಕೊಂಡಿಲ್ಲ. 65 ವರ್ಷ ಮೇಲಿನವರು ಕೂಡ ಬಹಳಷ್ಟು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎನ್ನುವ ನಿಯಮವೂ ಪಾಲನೆಯಾಗಿಲ್ಲ. ಹೀಗಾಗಿ, ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

‘ಇಲ್ಲವಾದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಿ ಸೂಕ್ತ ನಿರ್ದೇಶನಕ್ಕಾಗಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿ ಕಾನೂನು ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.