ADVERTISEMENT

ಕೋವಿಡ್ ನಿಯಂತ್ರಿಸಲು ಸುರಕ್ಷತಾ ಕ್ರಮ: ಹಿರೇಮಠ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 13:59 IST
Last Updated 22 ಫೆಬ್ರುವರಿ 2021, 13:59 IST
ಕೊಗನೋಳಿ ಚೆಕ್‌ಪೋಸ್ಟ್‌ನಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೋಮವಾರ ಪರಿಶೀಲಿಸಿದರು
ಕೊಗನೋಳಿ ಚೆಕ್‌ಪೋಸ್ಟ್‌ನಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೋಮವಾರ ಪರಿಶೀಲಿಸಿದರು   

ಬೆಳಗಾವಿ: ‘ಹೊಸ ಸ್ವರೂಪದ ಕೋವಿಡ್-19 ವೈರಾಣು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಗಡಿಯಲ್ಲಿ ಚೆಕ್‌ಪೋಸ್ಟ್ ಸ್ಥಾಪನೆ ಸೇರಿದಂತೆ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಪಕ್ಕದ ಮಹಾರಾಷ್ಟ್ರದಿಂದ ಬೆಳಗಾವಿ ನಗರ ಹಾಗೂ ಜಿಲ್ಲೆಗೆ ವಿಮಾನ, ಬಸ್, ರೈಲು ಹಾಗೂ ಖಾಸಗಿ ವಾಹನಗಳ ಮೂಲಕ ಪ್ರಯಾಣಿಸುವ ಸಾರ್ವಜನಿಕರ ಪ್ರವೇಶದ ಮೇಲೆ ನಿಗಾ ವಹಿಸಲಾಗಿದೆ. ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಮಹಾರಾಷ್ಟ್ರದಿಂದ ಜಿಲ್ಲೆಯ ಮೂಲಕ ಕರ್ನಾಟಕ ರಾಜ್ಯಕ್ಕೆ ಬರುವ ಪ್ರಯಾಣಿಕರು ಕಳೆದ 72 ಗಂಟೆಗಳ ಒಳಗೆ ಪಡೆದ ನೆಗೆಟಿವ್‌ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಗಡಿಯಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲಿಸಿದ ಬಳಿಕ ಪ್ರಯಾಣಿಕರು ರಾಜ್ಯ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಮಾರ್ಗಸೂಚಿ ಪ್ರಕಾರ ಪ್ರಯಾಣಿಕರ ತಪಾಸಣೆಗೆ ಕ್ರಮ ಕೈಗೊಳ್ಳಬೇಕು ಎಂಬ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ADVERTISEMENT

‘ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಸವದತ್ತಿ ಯಲ್ಲಮ್ಮ ಹಾಗೂ ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನಕ್ಕೆ ಸಾರ್ವಜನಿಕ ದರ್ಶನವನ್ನು ಕೂಡ ನಿರ್ಬಂಧಿಸಲಾಗಿದೆ’ ಎಂದು ಹೇಳಿದರು.

ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.