ಡಿ. ನಾಗಲಕ್ಷ್ಮಿ
ಬೆಳಗಾವಿ: ‘ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ.12ರಿಂದ 14ರವವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2025ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಾಗ, ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿತ್ತು. ಆದರೆ, ಈವರೆಗೂ ಅದು ಈಡೇರಿಲ್ಲ. ಏಪ್ರಿಲ್ 1ರಿಂದ ಅನ್ವಯವಾಗುವಂತೆ, ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.
‘2025ರ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಪ್ರೋತ್ಸಾಹಧನ ₹1 ಸಾವಿರ ಹೆಚ್ಚಿಸಲಾಗಿದೆ. ಅದೇ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನವನ್ನು ₹1 ಸಾವಿರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.
‘ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಅವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡುವುದನ್ನು ಕೈಬಿಡಬೇಕು. ಸೂಕ್ತ ವೇತನದೊಂದಿಗೆ ಆಶಾ ಸುಗಮಕಾರರನ್ನು ಮುಂದುವರಿಸಬೇಕು. ಸೇವಾನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು’ ಎಂದು ಆಗ್ರಹಿಸಿದರು.
ಲಕ್ಷ್ಮಣ ಜಡಗನ್ನವರ, ಗೀತಾ ರಾಯಗೋಳ, ರೂಪಾ ಅಂಗಡಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.