ADVERTISEMENT

ಆರೈಕೆ ಕೇಂದ್ರಕ್ಕೆ ತೆರಳಲು ಮನವೊಲಿಸಿದ ಡಿ.ಸಿ.

ಭೂತರಾಮನಹಟ್ಟಿ ಗ್ರಾಮದಲ್ಲಿ ‘ರ‍್ಯಾಟ್‌’ ಪ್ರಕ್ರಿಯೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 13:50 IST
Last Updated 1 ಜೂನ್ 2021, 13:50 IST
ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಜನರಿಗೆ ಮಂಗಳವಾರ ಕೋವಿಡ್ ಜಾಗೃತಿ ಮೂಡಿಸಿದರು
ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಜನರಿಗೆ ಮಂಗಳವಾರ ಕೋವಿಡ್ ಜಾಗೃತಿ ಮೂಡಿಸಿದರು   

ಬೆಳಗಾವಿ: ‘ಕೋವಿಡ್ ಸೋಂಕು ಪತ್ತೆ ಮಾಡುವ ಜೊತೆಗೆ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ‌.ಜಿ. ಹಿರೇಮಠ ಸೂಚನೆ ನೀಡಿದರು.

ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಗ್ರಾಮದಲ್ಲಿ ನಡೆದಿರುವ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ (ರ‍್ಯಾಟ್) ಪ್ರಕ್ರಿಯೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.

‘ಸೋಂಕಿತರನ್ನು ಗುರುತಿಸಿ ಅವರನ್ನು ಕೂಡಲೇ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿದರೆ ಮಾತ್ರ ಸೋಂಕು ಹರಡುವಿಕೆಯನ್ನು ತಡೆಗಟ್ಟುವುದು ಸಾಧ್ಯವಾಗಲಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ರ‍್ಯಾಟ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಸೋಂಕು ಪತ್ತೆ ಮಾಡುವುದರ ಜತೆಗೆ ಸೋಂಕಿತರ ಸಂಪರ್ಕಿತರನ್ನು ಕೂಡ ಸ್ಥಳಲ್ಲಿಯೇ ಪರೀಕ್ಷೆ ಮಾಡಲು ಅನುಕೂಲವಾಗಲಿದೆ’ ಎಂದರು.

ADVERTISEMENT

‘ಶೀತ, ಜ್ವರ ಹಾಗೂ ಕೋವಿಡ್ ಲಕ್ಷಣಗಳನ್ನು ಹೊಂದಿದವರು ಸ್ವಯಂಪ್ರೇರಣೆಯಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ದೃಢಪಟ್ಟರೆ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಬೇಕು’ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

‘ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಗುಣಮಟ್ಟದ ಊಟೋಪಹಾರ ಹಾಗೂ ಔಷಧೋಪಚಾರ ನೀಡಲಾಗುತ್ತಿದೆ. ಇದರಿಂದ ಸೋಂಕಿತರು ಶೀಘ್ರ ಗುಣಮುಖರಾಗಬಹುದು. ಚಿಕಿತ್ಸೆ ಅವಶ್ಯ ಇದ್ದವರನ್ನು ಮಾತ್ರ ಆಸ್ಪತ್ರೆಗೆ ಕಳುಹಿಸಲಾಗುತ್ತದೆ’ ಎಂದು ವಿವರಿಸಿದರು.

ಇದೇ ವೇಳೆ ಮನೆ‌ ಮನೆಗೆ ಭೇಟಿ ನೀಡಿದ ಅವರು, ‘ಕೋವಿಡ್ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ.‌ ಗ್ರಾಮಸ್ಥರು ಸರ್ಕಾರ ನೀಡಿರುವ ಮಾರ್ಗಸೂಚಿ ಪಾಲಿಸುವ ಮೂಲಕ ಸೋಂಕು ತಡೆಗಟ್ಟಲು ಕೈಜೋಡಿಸಬೇಕು’ ಎಂದು ಹೇಳಿದರು.

ಸೋಂಕು ದೃಢಪಟ್ಟ ಬಳಿಕ ಮನೆಯಲ್ಲಿಯೇ ಐಷೊಲೇಷನ್ ಇದ್ದ ಮಹಿಳೆ ಒಬ್ಬರನ್ನು ಭೇಟಿಯಾದ ಜಿಲ್ಲಾಧಿಕಾರಿ, ಅವರಿಗೆ ಕೋವಿಡ್ ಆರೈಕೆ ಕೇಂದ್ರದ ಬಗ್ಗೆ ಮಾಹಿತಿ ನೀಡಿ ದಾಖಲಾಗುವಂತೆ ಮನವೊಲಿಸಿದರು.

ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವ ಕುರಿತು ಗ್ರಾಮದಲ್ಲಿ ಜಾಗೃತಿ ಮೂಡಿಸಿದರು.

ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ತಹಶೀಲ್ದಾರ್‌ ಆರ್.ಕೆ. ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.