ADVERTISEMENT

ಕೋವಿಡ್–19: ತಪಾಸಣೆ ಹೆಚ್ಚಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 5:48 IST
Last Updated 14 ಏಪ್ರಿಲ್ 2021, 5:48 IST
ಡಾ.ಕೆ. ಹರೀಶ್‌ಕುಮಾರ್‌
ಡಾ.ಕೆ. ಹರೀಶ್‌ಕುಮಾರ್‌   

ಬೆಳಗಾವಿ: ‘ಎಲ್ಲೆಡೆ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚಿಸಬೇಕು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನೂ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್ ಸೂಚಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ಯಲ್ಲಿ ಜಿಲ್ಲೆಯ ಕೋವಿಡ್-19 ಸ್ಥಿತಿಗತಿ ಮತ್ತು ಚಿಕಿತ್ಸಾ ಸೌಲಭ್ಯಗಳ ಕುರಿತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

‘ನೆರೆಯ ಮಹಾರಾಷ್ಟ್ರ ಸೇರಿದಂತೆ ನಮ್ಮ ರಾಜ್ಯದಲ್ಲೂ ಕೆಲವೆಡೆ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಒಂದು ವೇಳೆ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸೋಂಕಿತರಿಗೆ ಸಕಾಲಕ್ಕೆ ಚಿಕಿತ್ಸೆ ಒದಗಿಸುವುದು ಸವಾಲಿನ ಕೆಲಸವಾಗಿರುತ್ತದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಹಾಸಿಗೆ ವ್ಯವಸ್ಥೆ, ಆಕ್ಸಿಜನ್, ಆಂಬುಲೆನ್ಸ್ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

ಕೋವಿಡ್ ತಪಾಸಣೆ ಹೆಚ್ಚಿಸಲು ನಿರ್ದೇಶನ:

‘ಸೋಂಕು‌ ಹರಡುವಿಕೆ ತಡೆಗಟ್ಟಬೇಕಾದರೆ ಸೋಂಕಿತರನ್ನು ಗುರುತಿಸಿ ಅವರನ್ನು ಪ್ರತ್ಯೇಕವಾಗಿರಿಸುವುದು ಅತ್ಯಗತ್ಯವಾಗಿದೆ. ಆದ್ದರಿಂದ ತಪಾಸಣೆ ಕಾರ್ಯ ಚುರುಕುಗೊಳಿಸಬೇಕು. ಸೋಂಕಿತರನ್ನು ಗುರುತಿಸಿ ಸಕಾಲದಲ್ಲಿ ಚಿಕಿತ್ಸೆ ನೀಡುವುದರಿಂದ ಮರಣ ಪ್ರಮಾಣ ಕಡಿಮೆಗೊಳಿಸಬಹುದು. ಆಸ್ಪತ್ರೆಗೆ ದಾಖಲಾಗುವ ಪ್ರತಿಯೊಬ್ಬ ಸೋಂಕಿತರಿಗೂ ಸರ್ಕಾರದ ಮಾರ್ಗಸೂಚಿ ಪ್ರಕಾರ ಸೂಕ್ತ ಚಿಕಿತ್ಸೆ ನೀಡಬೇಕು. ಲಸಿಕಾ ಅಭಿಯಾನವನ್ನೂ ಆದ್ಯತೆಯ ಮೇಲೆ ಮುಂದುವರಿಸಬೇಕು. ಸರ್ಕಾರ ನಿಗದಿಪಡಿಸುವ ಗುರಿ ಸಾಧನೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹುಸೇನಸಾಬ ಖಾಜಿ, ಬಿಮ್ಸ್ ಮುಖ್ಯ ಆಡಳಿತಾಧಿಕಾರಿ ಸಯೀದಾ ಆಫ್ರೀನ್ ಬಾನು ಬಳ್ಳಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್. ತುಕ್ಕಾರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.