ADVERTISEMENT

ತಾಲ್ಲೂಕುಗಳಲ್ಲಿ ಕೋವಿಡ್ ವಾರ್‌ ರೂಂ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 14:39 IST
Last Updated 20 ಏಪ್ರಿಲ್ 2021, 14:39 IST

ಬೆಳಗಾವಿ: ‘ಕೋವಿಡ್ ಸೋಂಕಿತರ ಮಾಹಿತಿ ಸಂಗ್ರಹ, ವಿನಿಮಯ ಮತ್ತು ತುರ್ತು ಚಿಕಿತ್ಸೆಗೆ ಅನುಕೂಲ ಆಗುವಂತೆ ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ನಡುವೆ ಮಾಹಿತಿ ವಿನಿಮಯಕ್ಕಾಗಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ವಾರ್ ರೂಂ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಿರ್ದೇಶನ ನೀಡಿದರು.

ಕೋವಿಡ್-19 ಮಾರ್ಗಸೂಚಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದರು.

‘ವಾರ್ ರೂಂ ಸ್ಥಾಪಿಸುವುದರಿಂದ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಾಕಷ್ಟು ಅನುಕೂಲ ಆಗಲಿದೆ. ‌ತಾಲ್ಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಈ ವಾರ್ ರೂಂ ಕಾರ್ಯನಿರ್ವಹಿಸಬೇಕು. ಪ್ರತಿದಿನದ ಸಮಗ್ರ‌ ಮಾಹಿತಿಯನ್ನು ಜಿಲ್ಲಾ ಕೇಂದ್ರಕ್ಕೆ ಕಳುಹಿಸಿದರೆ ಒಟ್ಟಾರೆ ಜಿಲ್ಲೆಯ ಪರಿಸ್ಥಿತಿ ಮೇಲೆ ನಿಗಾ ವಹಿಸಲು ಹಾಗೂ ಅಗತ್ಯವಿರುವ ಕಡೆಗೆ ಹೆಚ್ಚಿನ ಗಮನಹರಿಸಲು ಸಹಕಾರಿಯಾಗಲಿದೆ’ ಎಂದು ತಿಳಿಸಿದರು.

ADVERTISEMENT

‘ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯ ಪ್ರತಿ ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಕೋವಿಡ್-೧೯ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ತಹಶೀಲ್ದಾರರು, ತಾಲ್ಲೂಕು ಪಂಚಾಯ್ತಿ ಇಒಗಳು, ಆರೋಗ್ಯಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಿಕೊಂಡು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

‘ಕೋವಿಡ್-19 ತಪಾಸಣೆ, ಸೋಂಕಿತರ ಪತ್ತೆಹಚ್ಚುವಿಕೆ ಹಾಗೂ ಚಿಕಿತ್ಸೆಗೆ ಮತ್ತು ಕಾಲ‌ಕಾಲಕ್ಕೆ ಸರ್ಕಾರ ಪ್ರಕಟಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ತಂಡಗಳು ಕಾರ್ಯನಿರ್ವಹಿಸಬೇಕು.

‘ಪ್ರತಿ ತಾಲ್ಲೂಕಿನಲ್ಲಿ ಪ್ರತಿದಿನ ಕನಿಷ್ಠ 500 ಜನರನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಬೇಕು ಎಂಬ ಗುರಿ ನಿಗದಿಪಡಿಸಲಾಗಿದೆ. ಸೋಂಕಿತರನ್ನು ಪತ್ತೆ ಮಾಡಿ‌ ಅವರನ್ನು ಪ್ರತ್ಯೇಕವಾಗಿ ಇರಿಸುವುದರಿಂದ ಮಾತ್ರ ಸೋಂಕು ಹರಡುವಿಕೆ ನಿಯಂತ್ರಿಸಬಹುದು. ಆದ್ದರಿಂದ ಪ್ರತಿ ತಾಲ್ಲೂಕುಗಳಲ್ಲೂ ತಪಾಸಣೆ ಹೆಚ್ಚಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.