ADVERTISEMENT

ಸುವರ್ಣ ವಿಧಾನಸೌಧ ಸಮರ್ಪಕ ನಿರ್ವಹಣೆಗೆ ಕ್ರಮಕೈಗೊಳ್ಳಿ: ಡಿ.ಸಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 16:06 IST
Last Updated 1 ಜೂನ್ 2022, 16:06 IST
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು. ಭದ್ರತೆ, ಸ್ವಚ್ಛತೆ ಸೇರಿ ಸೌಧದ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.

ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕರ ಜೊತೆ ಚರ್ಚಿಸಿದ ನಂತರ ಅವರು ಮಾತನಾಡಿದರು.

‘ಸುವರ್ಣ ವಿಧಾನಸೌಧದ ಮುಂದೆ ಶಾವಿಗೆ ಒಣಗಿಸಲು ಹಾಕಿದ್ದ ಮಹಿಳಾ ಕಾರ್ಮಿಕರೊಬ್ಬರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ದೈನಂದಿನ ನಿರ್ವಹಣೆ ಕೆಲಸಗಳಿಗೆ ನಿಯೋಜಿಸಲಾಗುವ ಸಿಬ್ಬಂದಿ ಹಾಗೂ ಕಾರ್ಮಿಕರು ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು’ ಎಂದರು.

ADVERTISEMENT

ಭದ್ರತೆಗೆ ಸಂಬಂಧಿಸಿದ ಮಾಹಿತಿ ಕಲೆಹಾಕಿದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ‘ಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಗುರುತಿನ ಚೀಟಿ ಪರಿಶೀಲಿಸಿ ಪ್ರವೇಶ ಕಲ್ಪಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಯಾವುದೇ ರೀತಿಯ ಕೆಲಸ ‌ಮಾಡುವಾಗ ಸಂಬಂಧಿತ ಇಲಾಖೆ ಅಧಿಕಾರಿಗಳ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಯಾವುದೇ ಬಗೆಯ ಅಚಾತುರ್ಯ ನಡೆದರೆ, ಅವರನ್ನೇ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್‌.ಎಲ್‌.ಭೀಮಾನಾಯ್ಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.