ಚುನಾವಣೆ
ಬೆಳಗಾವಿ: ಇಲ್ಲಿನ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 9 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾದರು. ಈ ಪೈಕಿ ಜಾರಕಿಹೊಳಿ ಪೆನಲ್‌ನ ಏಳು ಮಂದಿ ಇದ್ದಾರೆ.
ಬ್ಯಾಂಕಿನ 16 ನಿರ್ದೇಶಕರ ಸ್ಥಾನಗಳಿಗೆ ಅ.19ರಂದು ಚುನಾವಣೆ ನಿಗದಿಯಾಗಿತ್ತು. ಆಯ್ಕೆ ಬಯಸಿ 43 ಅಭ್ಯರ್ಥಿಗಳಿಂದ 72 ನಾಮಪತ್ರ ಸಲ್ಲಿಕೆಯಾಗಿದ್ದವು. ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆ ದಿನವಾಗಿತ್ತು. ಈ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು.
ಯರಗಟ್ಟಿ ಕ್ಷೇತ್ರದಿಂದ ಶಾಸಕ ವಿಶ್ವಾಸ ವೈದ್ಯ, ಕಾಗವಾಡದಿಂದ ಶಾಸಕ ಭರಮಗೌಡ(ರಾಜು) ಕಾಗೆ, ಚಿಕ್ಕೋಡಿಯಿಂದ ಶಾಸಕ ಗಣೇಶ ಹುಕ್ಕೇರಿ, ಇತರೆ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಖಾನಾಪುರದಿಂದ ಮಾಜಿ ಶಾಸಕ ಅರವಿಂದ ಪಾಟೀಲ, ಬೆಳಗಾವಿಯಿಂದ ರಾಹುಲ್ ಜಾರಕಿಹೊಳಿ, ಗೋಕಾಕದಿಂದ ಅಮರನಾಥ ಜಾರಕಿಹೊಳಿ, ಸವದತ್ತಿಯಿಂದ ವಿರೂಪಾಕ್ಷಿ ಮಾಮನಿ, ಮೂಡಲಗಿಯಿಂದ ನೀಲಕಂಠ ಕಪ್ಪಲಗುದ್ದಿ ಅವಿರೋಧವಾಗಿ ಆಯ್ಕೆಯಾದರು.
‘ನಾಮಪತ್ರ ಹಿಂದಕ್ಕೆ ಪಡೆದೆ’
‘ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸೋತರೆ, ಮುಂದೆ ಸಂಪುಟಕ್ಕೆ ಸೇರುವ ಸಾಧ್ಯತೆಗೆ ಅಡ್ಡಿಯಾಗಬಹುದು. ಅದಕ್ಕೆ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದಿಂದ ಸಲ್ಲಿಸಿದ್ದ ನಾಮಪತ್ರ ಹಿಂಪಡೆದಿದ್ದೇನೆ’ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
‘ನಾನು ಸಚಿವ ಸ್ಥಾನದ ಆಕಾಂಕ್ಷಿ. ಶೀಘ್ರ ನಡೆಯಲಿರುವ ಸಂಪುಟ ವಿಸ್ತರಣೆ ವೇಳೆ, ಸಚಿವ ಸ್ಥಾನ ಸಿಗುವ ಭರವಸೆಯಿದೆ. ನಾಮಪತ್ರ ಹಿಂಪಡೆಯುವ ನಿರ್ಧಾರ ವೈಯಕ್ತಿಕ. ಯಾರ ಒತ್ತಡಕ್ಕೂ ಮಣಿದಿಲ್ಲ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಇಂದು ಬೆಳಿಗ್ಗೆ ಭೇಟಿಯಾಗಿದ್ದೆ. ಆದರೆ, ಡಿಸಿಸಿ ಬ್ಯಾಂಕ್ ಚುನಾವಣೆ ವಿಷಯದ ಬಗ್ಗೆ ಚರ್ಚಿಸಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.