ADVERTISEMENT

ಬಿಮ್ಸ್‌ ಸಮಸ್ಯೆ 4 ದಿನಗಳಲ್ಲಿ ಬಗೆಹರಿಸಿ: ಸವದಿ ತಾಕೀತು

​ಪ್ರಜಾವಾಣಿ ವಾರ್ತೆ
Published 29 ಮೇ 2021, 13:37 IST
Last Updated 29 ಮೇ 2021, 13:37 IST
   

ಬೆಳಗಾವಿ: ‘ಜಿಲ್ಲಾಸ್ಪತ್ರೆ (ಬಿಮ್ಸ್‌)ಯಲ್ಲಿ ಆಂತರಿಕವಾಗಿ ಯಾವುದೇ ಆಡಳಿತಾತ್ಮಕ ಸಮಸ್ಯೆಗಳಿದ್ದರೆ ನಾಲ್ಕೈದು ದಿನಗಳಲ್ಲಿ ಬಗೆಹರಿಸಿಕೊಂಡು ಜನರಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಪರಿಸ್ಥಿತಿ ಸುಧಾರಣೆ ಆಗದಿದ್ದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಬೇರೆ ಜಿಲ್ಲೆಗಳಲ್ಲಿರುವ ಜಿಲ್ಲಾಸ್ಪತ್ರೆಗಳಿಗೆ ಹೋಲಿಸಿದರೆ ಇಲ್ಲಿ ಸಮರ್ಪಕ ನಿರ್ವಹಣೆ ಇಲ್ಲ. ಐಸಿಯು ಕೂಡ ನಿರ್ವಹಿಸುತ್ತಿಲ್ಲ. ವಾರ್ಡ್‌ ಮತ್ತು ಐಸಿಯುಗಳಲ್ಲಿ ಸ್ವಚ್ಛತೆ ನಿರ್ಲಕ್ಷಿಸಲಾಗಿದೆ. ಕೋವಿಡ್‌ನಿಂದ ಸಾವು-ಬದುಕಿನ ಮಧ್ಯೆ ಸೆಣಸಾಡುತ್ತಿರುವ ಜನರು ಬಿಮ್ಸ್‌ಗೆ ದಾಖಲಾಗುತ್ತಾರೆ.‌ ಸರಿಯಾದ ಚಿಕಿತ್ಸೆ ನೀಡದಿದ್ದರೆ ಅವರ ಶಾಪ‌ ನಮ್ಮೆಲ್ಲರಿಗೂ ತಟ್ಟುತ್ತದೆ. ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ಸರಿಯಾದ ಚಿಕಿತ್ಸೆ ನೀಡದಿದ್ದರೆ ಏನು ಪ್ರಯೋಜನ?’ ಎಂದು ತರಾಟೆಗೆ ತೆಗೆದುಕೊಂಡರು.

ADVERTISEMENT

‘ಪಕ್ಕದಲ್ಲಿಯೇ ಮೃತದೇಹ ಇಟ್ಟರೆ, ರೋಗಿಗಳ ಗತಿ ಏನು’ ಎಂದು ಖಾರವಾಗಿ ಪ್ರಶ್ನಿಸಿದರು. ‘ಮೃತದೇಹವನ್ನು ತಕ್ಷಣವೇ ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಬೇಕು’ ಎಂದು ಸೂಚಿಸಿದರು.

‘ಪ್ರತಿ ದಿನ ಮೂರು ಪಾಳಿಗಳ ಆಧಾರದ ಮೇಲೆ ವೈದ್ಯರು, ಇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು. ಎಲ್ಲ ವಾರ್ಡ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

‘ಬಿಮ್ಸ್ ಬೇಡಿಕೆಗೆ ಅನುಗುಣವಾಗಿ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ಸಿಬ್ಬಂದಿಯನ್ನು ಜಿಲ್ಲಾಡಳಿತದಿಂದ ಒದಗಿಸಲಾಗಿದೆ. ಆದಾಗ್ಯೂ ಕೋವಿಡ್ ವಾರ್ಡ್‌ಗಳಲ್ಲಿ ಸೋಂಕಿತರ ಸಹಾಯಕರು ಕಂಡುಬರುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

‘ಹಳೆ ವಾರ್ಡ್‌ಗಳಲ್ಲಿ ಮಾತ್ರ ಸ್ವಚ್ಛತೆ ಸಮಸ್ಯೆ ಇದೆ. ಆದರೆ, ದೂರವಿರುವ ಹೊಸ ವಾರ್ಡ್‌ಗಳಲ್ಲಿ ಸ್ವಚ್ಛತೆ ಸಮಸ್ಯೆ ಇಲ್ಲ’ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದರು.

ಶಾಸಕ ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.