ADVERTISEMENT

ಬೆಳಗಾವಿಯಲ್ಲಿ ಸೈನಿಕ ಶಾಲೆ‌ಗೆ ಒತ್ತಾಯ: ರಾಜನಾಥ ಸಿಂಗ್ ಜತೆ ಜಾರಕಿಹೊಳಿ‌ ಚರ್ಚೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 14:45 IST
Last Updated 2 ಫೆಬ್ರುವರಿ 2021, 14:45 IST
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೆಂಗಳೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮಂಗಳವಾರ ಭೇಟಿಯಾದರು
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೆಂಗಳೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮಂಗಳವಾರ ಭೇಟಿಯಾದರು   

ಬೆಳಗಾವಿ: ಜಿಲ್ಲಾ ಉಸ್ತುವಾರಿಯೂ ಆಗಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಅವರುರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿಯಾಗಿ ಚರ್ಚಿಸಿದರು.

‘ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವುದಾಗಿ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವುದು ಸ್ವಾಗತಾರ್ಹ. ಕಿತ್ತೂರು ರಾಣಿ ಚನ್ನಮ್ಮ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕು’ ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

‘ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದ್ದಾರೆ.

ADVERTISEMENT

ರಾಜನಾಥ್ ಸಿಂಗ್ ಅವರನ್ನು ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಭೇಟಿಯಾದ ನಿಯೋಗವು ಐಟಿ ಪಾರ್ಕ್‌ ನಿರ್ಮಾಣದ ಬಗ್ಗೆ ಚರ್ಚಿಸಿತು. ‘ನಗರದಲ್ಲಿರುವ 774 ಎಕರೆ ಜಾಗ ಕರ್ನಾಟಕ ಸರಕಾರದ್ದಾಗಿದೆ. ಅದು ಸದ್ಯ ರಕ್ಷಣಾ ಇಲಾಖೆಯ ಅಧೀನದಲ್ಲಿರುವುದರಿಂದ ಅದನ್ನು ಶೀಘ್ರವೇ ಸರ್ಕಾರಕ್ಕೆ ಹಸ್ತಾಂತರಿಸಬೇಕು. ಪಾರ್ಕ್‌ ನಿರ್ಮಾಣವಾದಲ್ಲಿ ಉತ್ತರ ಕರ್ನಾಟಕದ ಒಂದು ಲಕ್ಷ ಉದ್ಯೋಗಾವಕಾಶ ಲಭಿಸುತ್ತದೆ’ ಎಂದು ಅಭಯ ಪಾಟೀಲ ಮನವರಿಕೆ ಮಾಡಿಕೊಟ್ಟರು.

50 ಶಾಸಕರು ಸಹಿ ನಾಡಿದ ಮನವಿ ಪತ್ರವನ್ನು ಸಲ್ಲಿಸಿದರು. ‘ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ, ಶೀಘ್ರ ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವರು ತಿಳಿಸಿದರು.

ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಶಾಸಕರಾದ ಅಭಯ ಪಾಟೀಲ, ಅನಿಲ ಬೇನಕೆ, ಮಹಾದೇವಪ್ಪ ಯಾದವಾಡ, ಮಹಾಂತೇಶ ದೊಡ್ಡಗೌಡರ ಹಾಗೂ ಮಹೇಶ ಕುಮಠಳ್ಳಿ ನಿಯೋಗದಲ್ಲಿದ್ದರು.

ಐಟಿ ಪಾರ್ಕ್‌ ನಿರ್ಮಾಣಕ್ಕೆ ಶಾಸಕ ಅಭಯ ಪಾಟೀಲ ಕಳೆದ ವಿಧಾನಸಭೆಯ ಅಧಿವೇಶನದಲ್ಲಿ ಖಾಸಗಿ ನಿರ್ಣಯ ಮಂಡಿಸಿದ್ದರು. ಇದಕ್ಕೆ ಸರ್ಕಾರವು ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಐಟಿ–ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಕೂಡ ಈಚೆಗೆ ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.