ADVERTISEMENT

ಬೆಳಗಾವಿ: ಲಕ್ಷ್ಮಣ ಸವದಿಗೆ ಸಚಿವ ಸ್ಥಾನ; ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 7:21 IST
Last Updated 13 ಆಗಸ್ಟ್ 2021, 7:21 IST

ಬೆಳಗಾವಿ: ‘ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡಬೇಕು’ ಎಂದು ಗಾಣಿಗ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಉಟಗಿ ಆಗ್ರಹಿಸಿದರು.‌

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸವದಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಉಪ ಮುಖ್ಯಮಂತ್ರಿ ಜವಾಬ್ದಾರಿಯನ್ನೂ ಕೊಡಲಾಗಿತ್ತು. ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಕೈಬಿಟ್ಟಿದ್ದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸಮಾಜದವರಿಗೆ ಹಿಂದಿನ ಸರ್ಕಾರಗಳಲ್ಲಿ ಅವಕಾಶ ಕೊಡಲಾಗುತ್ತಿತ್ತು. ಆದರೆ, ಈಗ ಸಮುದಾಯಕ್ಕೆ ಅನ್ಯಾಯವಾಗಿದೆ. ಕಾಗವಾಡ, ಅಥಣಿ, ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಳಲ್ಲಿ ನೇತೃತ್ವ ವಹಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಸವದಿ ಅವರಿಗೆ, ಉಳಿದಿರುವ 4 ಸ್ಥಾನಗಳಲ್ಲಿ ಒಂದನ್ನು ನೀಡಬೇಕು’ ಎಂದು ಆಗ್ರಹಿಸಿದರು.‌

ADVERTISEMENT

‘ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಗೆದ್ದಿರುವ ಗಾಣಿಗ ಸಮುದಾಯದ ಪಿ.ಸಿ. ಗದ್ದಿಗೌಡರ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಕೊಡದೆ ಇರುವುದು ಖಂಡನೀಯ. ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಮುಂದಿನ ದಿನಗಳಲ್ಲಾದರೂ ಸರಿಪಡಿಸದೆ ಹೋದರೆ ಮುಂಬರುವ ಉಪ ಚುನಾವಣೆಗಳು ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.