ADVERTISEMENT

ಅತಿಥಿ ಶಿಕ್ಷಕರಿಗೆ ಗೌರವಧನ ಮಂಜೂರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 9:47 IST
Last Updated 17 ನವೆಂಬರ್ 2020, 9:47 IST

ಬೆಳಗಾವಿ: ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಕೋವಿಡ್–19 ಲಾಕ್‌ಡೌನ್‌ ಅವಧಿಯನ್ನು ‘ಆನ್‌ ಡ್ಯೂಟಿ’ ಎಂದು ಪರಿಗಣಿಸಿ ನಿಗದಿತ ಗೌರವಧನ ಮಂಜೂರು ಮಾಡುವಂತೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ವಿದ್ಯಾರ್ಥಿ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ತೋಳಿ ಭರಮಣ್ಣ ಸಲ್ಲಿಸಿದ ಮನವಿಯನ್ನು ಉಲ್ಲೇಖಿಸಿರುವ ಅವರು, ‘ಈ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಗಣಿಸಬೇಕು. ತಕ್ಷಣ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

‘ಸರ್ಕಾರವು ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಮಾತ್ರ ಗೌರವಧನ ಘೋಷಿಸಿ, ಉಳಿದವರಿಗೆ ಅನ್ಯಾಯ ಮಾಡಿದೆ. ಇದು ಸರಿಯಲ್ಲ. ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ 30ಸಾವಿರ ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೂ ಆರ್ಥಿಕ ನೆರವು ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಭರಮಣ್ಣ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.