ADVERTISEMENT

ರೈತರಿಗೆ ಭದ್ರತೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 10:57 IST
Last Updated 4 ಅಕ್ಟೋಬರ್ 2021, 10:57 IST
ಕೇಂದ್ರ ರೂಪಿಸಿದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಭದ್ರತೆ ಒದಗಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ಅಧ್ಯಕ್ಷ ಸಿದಗೌಡ ಮೋದಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
ಕೇಂದ್ರ ರೂಪಿಸಿದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಭದ್ರತೆ ಒದಗಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ಅಧ್ಯಕ್ಷ ಸಿದಗೌಡ ಮೋದಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು   

ಬೆಳಗಾವಿ: ‘ಉತ್ತರಪ್ರದೇಶದ ಲಿಖಿಂಪುರ್‌ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ವಾಹನ ಹರಿಸಿ ನಾಲ್ವರು ರೈತರನ್ನು ಬಲಿ ಪಡೆದ ಆರೋಪಿಯನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆಯವರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಸಿದಗೌಡ ಮೋದಗಿ, ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಇಂತಹ ಘಟನೆಗಳಿಂದ ಸಾಬೀತಾಗುತ್ತಿದೆ’ ಎಂದು ದೂರಿದರು.

‘ಆ ಕೇಂದ್ರ ಸಚಿವರನ್ನು ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಪ್ರತಿಭಟನಾನಿರತ ರೈತರ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ಹಲ್ಲೆ ನಡೆಯುತ್ತಿದ್ದರೂ, ಪ್ರಾಣ ಹಾನಿ ಆಗುತ್ತಿದ್ದರೂ ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸದಿರುವುದು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದಂತಾಗಿದೆ’ ಎಂದು ದೂರಿದರು.

‘ಕೇಂದ್ರವು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು. ನ್ಯಾಯಸಮ್ಮತ ಬೇಡಿಕೆ ಈಡೇರಿಕೆಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಸಂತೋಷ ಕಾಮತ್, ಸುಭಾಷ್ ಪಾಟೀಲ, ರಮೇಶ ವಾಲಿ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.