ADVERTISEMENT

ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 15:11 IST
Last Updated 12 ಜನವರಿ 2021, 15:11 IST
ಬೆಳಗಾವಿಯ ತಾಲ್ಲೂಕು ಪಂಚಾಯ್ತಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿದರುಪ್ರಜಾವಾಣಿ ಚಿತ್ರ
ಬೆಳಗಾವಿಯ ತಾಲ್ಲೂಕು ಪಂಚಾಯ್ತಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ‘ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಬರುತ್ತಿಲ್ಲ. ಪರಿಣಾಮ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ನೌಕರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದಾಯ ಬರುತ್ತಿಲ್ಲ ಎಂಬ ಕುಂಟು ನೆಪ ಹೇಳಿಕೊಂಡು ಸಾರಿಗೆ ಅಧಿಕಾರಿಗಳು ಬಸ್‌ಗಳ ಕಾರ್ಯಾಚರಣೆ ನಿಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯರು ಆಗ್ರಹಿಸಿದರು.

ಇಲ್ಲಿನ ತಾಲ್ಲೂಕು ಪಂಚಾಯ್ತಿಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರು, ಎನ್‌ಡಬ್ಲ್ಯುಕೆಆರ್‌ಟಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

‘ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಮತ್ತು ಖಾಸಗಿ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಫ್ಯಾನ್ ಸೇರಿದಂತೆ ಮೂಲಸೌಕರ್ಯಗಳು ಇಲ್ಲ. ಮಕ್ಕಳು ಕಲಿಯುವ ಸ್ಥಳದಲ್ಲೇ ಅಡುಗೆ ತಯಾರಿಸಲಾಗುತ್ತಿದೆ. ಇದು ಹಲವು ಅಪಾಯಗಳಿಗೆ ಆಹ್ವಾನ ನೀಡುತ್ತಿದೆ’ ಎಂದು ಸದಸ್ಯರು ದೂರಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಇಒ ಮಲ್ಲಿಕಾರ್ಜುನ ಕಲಾದಗಿ, ‘ಸರ್ಕಾರಿ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಅಲ್ಲದೆ ಖಾಸಗಿ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಸೌಲಭ್ಯ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು’ ಎಂದರು.

‘ತಾಲ್ಲೂಕಿನಲ್ಲಿ 674 ಅಂಗನವಾಡಿ ಕೇಂದ್ರಗಳಿವೆ. ಅದರಲ್ಲಿ 200 ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಖಾಸಗಿ ಕಟ್ಟಡದಲ್ಲಿರುವಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ತಕ್ಷಣದಿಂದಲೇ ಕಲ್ಪಿಸಬೇಕು. ಮಕ್ಕಳ ಕಲಿಕಾ ಕೊಠಡಿ ಮತ್ತು ಅಡುಗೆ ಕೋಣೆ ಪ್ರತ್ಯೇಕವಾಗಿರಬೇಕು’ ಎಂದು ಸೂಚಿಸಿದರು.

‘ನಮ್ಮ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಮ್ಮ ಅಧಿಕಾರದ ಅವಧಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಸದಸ್ಯರು ಅಧಿಕಾರಿಗಳಿಗೆ ಸೂಚಿಸಿದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾದರೆ ನೀತಿಸಂಹಿತೆ ಜಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ನಾಲ್ಕೈದು ದಿನಗಳಲ್ಲಿ ಎಲ್ಲ ಕಾಮಗಾರಿಗಳಿಗೆ ಚಾಲನೆ ನೀಡಬೇಕು. ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ವಹಿಸಲಾಗುವುದು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. 2019-20 ಮತ್ತು 2020-21ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಬಂದಿರುವ ಅನುದಾನ ವಾಪಸ್ ಆಗದಂತೆ ನೋಡಿಕೊಳ್ಳಬೇಕು’ ಎಂದು ಅಧ್ಯಕ್ಷ ಶಂಕರಗೌಡ ಪಾಟೀಲ ತಾಕೀತು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.