
ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಕತ್ರಿದಡ್ಡಿ ಸರ್ಕಾರಿ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆ ಬಿಡುವ ವೇಳೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.
ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಕುರಬರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮಹಾಂತೇಶ ಎಮ್ಮಿ ಗುರುವಾರ ಪತ್ರಕರ್ತರ ಜತೆ ಮಾತನಾಡಿ ‘ಕುಲವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂಬತ್ತು ಗ್ರಾಮಗಳು ಬರುತ್ತವೆ. ಈ ಎಲ್ಲ ಹಳ್ಳಿಗಳ ಮಕ್ಕಳು ಕತ್ರಿದಡ್ಡಿ ಪ್ರೌಢಶಾಲೆಗೆ ಓದಲು ಬರುತ್ತಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 300 ತಲುಪಿದೆ. ಬೆಳಿಗ್ಗೆ ವೇಳೆ ಎರಡು ಬಸ್ ವ್ಯವಸ್ಥೆಯಿದೆ. ಶಾಲೆ ಬಿಟ್ಟ ನಂತರ ಒಂದೇ ಬಸ್ ಸಂಚರಿಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ’ ಎಂದು ಹೇಳಿದರು.
‘ಸಾರಿಗೆ ಅಧಿಕಾರಿಗಳು ವಿದ್ಯಾರ್ಥಿನಿಯರ ಪ್ರಯಾಣದ ಈ ಸಮಸ್ಯೆಗೆ ಸ್ಪಂದಿಸಬೇಕು. ಹೆಚ್ಚುವರಿ ಮತ್ತೊಂದು ಬಸ್ ಸಂಜೆ ವೇಳೆ ಓಡಿಸಬೇಕು’ ಎಂದು ಅವರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.