ADVERTISEMENT

ಸರ್ಕಾರಿ ಆಸ್ಪತ್ರೆಗಳ ಬಲವರ್ಧನೆಗೆ ಬದ್ಧ: ಸಚಿವ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2019, 12:07 IST
Last Updated 14 ಜನವರಿ 2019, 12:07 IST
ಬೆಳಗಾವಿಯ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ನಾಗರಿಕ ಸೌಲಭ್ಯಗಳ ಸಂಕೀರ್ಣವನ್ನು ಸೋಮವಾರ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿದರು
ಬೆಳಗಾವಿಯ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ನಾಗರಿಕ ಸೌಲಭ್ಯಗಳ ಸಂಕೀರ್ಣವನ್ನು ಸೋಮವಾರ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿದರು   

ಬೆಳಗಾವಿ:‘ಸರ್ಕಾರಿ ಆಸ್ಪತ್ರೆಗಳ ಬಲವರ್ಧನೆ ಮತ್ತು ಖಾಸಗಿ ಕಾಲೇಜುಗಳಂತೆಯೇಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುವಂತೆ ಮಾಡಲುಅಗತ್ಯ ಕ್ರಮ ಕೈಗೊಳ್ಳಲಾಗಿದೆ’ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.‌

ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರಿಂಗ್‌ ಘಟಕದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

‘ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ನಿಗದಿಪ‍ಡಿಸಲಾಗಿತ್ತು. ತಡವಾಗಿಯಾದರೂ ಕಾಮಗಾರಿ ಆರಂಭಗೊಂಡಿದೆ. ₹ 165 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ ಆಸ್ಪತ್ರೆಯಲ್ಲಿ ವಿವಿಧ 13 ವಿಭಾಗಗಳು ಇರಲಿವೆ. 290 ಹಾಸಿಗೆಗಳ ಆಸ್ಪತ್ರೆ ಇದಾಗಿದೆ. ಅತ್ಯಾಧುನಿಕ ಸೌಲಭ್ಯ ಒಳಗೊಂಡಿರಲಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದು ಸಿದ್ಧಗೊಂಡಲ್ಲಿ ಈ ಭಾಗದ ಬಡ ರೋಗಿಗಳಿಗೆ ಬಹಳ ಅನುಕೂಲವಾಗಲಿದೆ’ ಎಂದು ತಿಳಿಸಿದರು.

ADVERTISEMENT

ವಿವಿಧ ಅಭಿವೃದ್ಧಿ ಕಾರ್ಯಕ್ರಮ:‘ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿಯೂ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲವನ್ನೂ ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಹಂತ ಹಂತವಾಗಿ ಎಲ್ಲವನ್ನೂ ಪರಿಶೀಲಿಸಿ, ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಸೂಚಿಸಲಾಗುವುದು’ ಎಂದರು.

ಇದೇ ವೇಳೆ, ನಾಗರಿಕ ಸೌಲಭ್ಯಗಳ ಸಂಕೀರ್ಣದಲ್ಲಿ ನಿರ್ಮಿಸಿದ ಕ್ಯಾಂಟಿನ್ ಹಾಗೂ ಅಂಗಡಿ ಮಳಿಗೆಗಳು,ವಿದ್ಯಾರ್ಥಿಗಳ ಹಾಸ್ಟೆಲ್‌, ನಿವಾಸಿ ವೈದ್ಯರ ವಸತಿನಿಲಯ ಹಾಗೂ ಪಾವತಿಸಿ ಬಳಸುವ ಶೌಚಾಲಯವನ್ನು ಸಚಿವರು ಉದ್ಘಾಟಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕದಿಂದ ರಾಷ್ಟ್ರೀಯ ವೃದ್ಧರ ಕ್ಷೇಮಾಭಿವೃದ್ಧಿ ಕಾರ್ಯಕ್ರಮದಡಿ ನಿರ್ಮಿಸಿರುವ ವೃದ್ಧರ ಹೊರ ಮತ್ತು ಒಳರೋಗಿಗಳ ವಿಭಾಗವನ್ನೂ ಲೋಕಾರ್ಪಣೆ ಮಾಡಿದರು. ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು. ಅನುದಾನ ಮೊದಲಾದ ತೊಂದರೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹುದ್ದೆ ಭರ್ತಿಗೆ ಮನವಿ:‘ಬಿಮ್ಸ್‌ನಲ್ಲಿ ಒಳ್ಳೆಯ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಸರ್ಕಾರಿ ಕಾಲೇಜುಗಳೆಂದರೆ ಅಲ್ಲಿ ಯಾವುದೇ ಸೌಲಭ್ಯಗಳು ಇರುವುದಿಲ್ಲ ಎಂದು ಕೆಲವರು ಭಾವಿಸಿದ್ದಾರೆ. ಆದರೆ ಬಿಮ್ಸ್‌ನಲ್ಲಿ ಯಾವುದೇ ಖಾಸಗಿ ಕಾಲೇಜಿಗೆ ಕಡಿಮೆ ಇಲ್ಲದಂತೆ ಬೋಧಿಸಲಾಗುತ್ತಿದೆ; ಸೌಲಭ್ಯ ನೀಡಲಾಗುತ್ತಿದೆ’ ಎಂದು ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡರು. ಬಿಮ್ಸ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಬೋಧಕರು ಸಚಿವರನ್ನು ಕೋರಿದರು.

ಮೇಯರ್‌ ಬಸಪ್ಪ ಚಿಕ್ಕಲದಿನ್ನಿ, ಉಪ‌ಮೇಯರ್‌ ಮಧುಶ್ರೀ ಪೂಜಾರಿ, ಪಾಲಿಕೆ ಸದಸ್ಯರಾದ ಸರಳಾ ಹೇರೇಕರ, ಜಯಶ್ರೀ ಮಾಳಗಿ, ಮಾಯಾ ಕಡೊಲಕರ, ಬಿಮ್ಸ್‌ ನಿರ್ದೇಶಕ ಡಾ.ಷಣ್ಮುಖ ಟಿ. ಕಳಸದ ಇದ್ದರು.

ಸಚಿವರ ಭೇಟಿ ಕಾರಣದಿಂದ, ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿತ್ತು. ಅಲ್ಲಲ್ಲಿ ಡಿಡಿಟಿ ಸಿಂಪಡಿಸಲಾಗಿತ್ತು. ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಸಚಿವರು ಮಧ್ಯಾಹ್ನ 12ರ ನಂತರ ಬಂದರು. ಇದರಿಂದಾಗಿ ನರ್ಸಿಂಗ್ ವಿದ್ಯಾರ್ಥಿಗಳು, ಬಿಮ್ಸ್‌ನ ಕೆಲವು ಸಿಬ್ಬಂದಿ ಹಾಗೂ ಅಧಿಕಾರಿಗಳು ಕಾದು ಸುಸ್ತಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.