ಬೆಳಗಾವಿಯಲ್ಲಿ ಭಕ್ತರು, ವಿವಿಧ ಸಂಘ–ಸಂಸ್ಥೆಯವರಿಂದ ಪ್ರತಿಭಟನೆ
ಬೆಳಗಾವಿ: ‘ನಾಡಿನ ಪ್ರಮುಖ ಧಾರ್ಮಿಕ ಕೇಂದ್ರ ಧರ್ಮಸ್ಥಳಕ್ಕೆ ಅಪಕೀರ್ತಿ ತರಲು ಹುನ್ನಾರ ನಡೆಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ನಗರದಲ್ಲಿ ಭಕ್ತರು ಮತ್ತು ವಿವಿಧ ಸಂಘ–ಸಂಸ್ಥೆಯವರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಕಾರರು ಮಾನವ ಸರಪಳಿ ನಿರ್ಮಿಸಿ, ಧಾರ್ಮಿಕ ಕ್ಷೇತ್ರದ ವಿರುದ್ಧ ಹೇಳಿಕೆ ನೀಡುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಮೂಲಕ ತೆರಳಿ, ‘ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವ ಕುರಿತು ತನಿಖೆ ಕೈಗೊಳ್ಳಬೇಕು. ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.
‘ಧರ್ಮಸ್ಥಳಕ್ಕೆ 800 ವರ್ಷಗಳ ಇತಿಹಾಸವಿದೆ. ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತಿತರ ರಾಜ್ಯಗಳಿಂದ ನಿತ್ಯ 50 ಸಾವಿರದಿಂದ 1 ಲಕ್ಷ ಭಕ್ತರು ಮಂಜುನಾಥ ಸ್ವಾಮಿ ದರ್ಶನ ಪಡೆಯಲು ಆಗಮಿಸುತ್ತಾರೆ. ಆದರೆ, ಕೆಲವರು ದುರುದ್ದೇಶದಿಂದ ಧಾರ್ಮಿಕ ಕ್ಷೇತ್ರದ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಬೆಳಗಾವಿಯಲ್ಲಿ ಭಕ್ತರು, ವಿವಿಧ ಸಂಘ–ಸಂಸ್ಥೆಯವರಿಂದ ಪ್ರತಿಭಟನೆ
‘ಅನಾಮಿಕ ವ್ಯಕ್ತಿಯ ದೂರು ಆಧರಿಸಿ ಧರ್ಮಸ್ಥಳದಲ್ಲಿ ನಡೆಯುತ್ತಿರುವ ತನಿಖೆ ಬಗ್ಗೆ ಇನ್ನೂ ಸರ್ಕಾರಕ್ಕೆ ವರದಿಯೇ ಸಲ್ಲಿಕೆಯಾಗಿಲ್ಲ. ಆದರೆ, ಈಗಲೇ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಕ್ಷೇತ್ರ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ’ ಎಂದು ದೂರಿದರು.
ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ‘ಧರ್ಮಸ್ಥಳ ಪವಿತ್ರ ಧಾರ್ಮಿಕ ಸ್ಥಳ. ಇದಕ್ಕೆ ಧಕ್ಕೆ ಬಂದಾಗ ಹೋರಾಡುವುದು ಪ್ರತಿಯೊಬ್ಬರ ಕರ್ತವ್ಯ. ಅದಕ್ಕಾಗಿ ಮಠಾಧೀಶರೆಲ್ಲ ಹೋರಾಟಕ್ಕೆ ಇಳಿದಿದ್ದೇವೆ. ಧರ್ಮಸ್ಥಳದ ಹೆಸರಿಗೆ ಅಪಕೀರ್ತಿ ತರುತ್ತಿರುವವರಿಗೆ ಗಲ್ಲುಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.
ಹಿರೇಮುನವಳ್ಳಿಯ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ, ಸುತಗಟ್ಟಿಯ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಮುಖಂಡರಾದ ಜಿ.ಆರ್.ಸೋನೇರ, ಪ್ರಭಾಕರ ಶೆಟ್ಟಿ, ಆನಂದ ಶೆಟ್ಟಿ, ಸಂತೋಷ ಶೆಟ್ಟಿ, ಜಯರಾಮ ಶೆಟ್ಟಿ, ಕೃಷ್ಣಭಟ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.