ADVERTISEMENT

ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ: ಆಯೋಗ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 13:02 IST
Last Updated 11 ಏಪ್ರಿಲ್ 2021, 13:02 IST

ಬೆಳಗಾವಿ: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಸಭೆ, ರ‍್ಯಾಲಿ ಹಾಗೂ ಸಮಾವೇಶಗಳಲ್ಲಿ ಮಾರ್ಗಸೂಚಿ ಉಲ್ಲಂಘನೆ ಆಗುತ್ತಿರುವುದನ್ನು ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಪದೇ ಪದೇ ಮಾರ್ಗಸೂಚಿ ಉಲ್ಲಂಘಿಸುವುದು ಕಂಡುಬಂದರೆ ಚುನಾವಣಾ ರ‍್ಯಾಲಿ, ಸಾರ್ವಜನಿಕ ಸಮಾವೇಶ ಇತ್ಯಾದಿಗಳನ್ನು ನಿಷೇಧಿಸಲು ಕೂಡ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ಎಲ್ಲ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ ಬರೆದಿರುವ ಆಯೋಗವು, ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್-19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ‌ ತಿಳಿಸಿದೆ. ಎಲ್ಲರೂ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಹಾಗೂ ‌ಥರ್ಮಲ್ ಸ್ಕ್ಯಾನರ್ ಬಳಕೆ ಮಾಡುವುದು ಆಯಾ ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳ ಜವಾಬ್ದಾರಿಯಾಗಿದೆ. ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60 ಮತ್ತು ಭಾರತೀಯ ದಂಡಸಂಹಿತೆ-1860ರ‌ ಕಲಂ 188ರ ಪ್ರಕಾರ ಕ್ರಮ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದೆ.

‘ಉಪ ಚುನಾವಣಾ ಪ್ರಚಾರದ ವೇಳೆ ಮಾರ್ಗಸೂಚಿ ಪಾಲಿಸಬೇಕು. ಒಂದು ವೇಳೆ ನಿಯಮ‌ ಉಲ್ಲಂಘಿಸಿದರೆ ಚುನಾವಣಾ ಆಯೋಗದ ನಿರ್ದೇಶನದಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.