ADVERTISEMENT

ಬೆಳಗಾವಿಯಲ್ಲಿ ನೌಕರರ ಭವನ ನಿರ್ಮಾಣ ಶೀಘ್ರ: ಸಿ.ಎಸ್‌.ಷಡಾಕ್ಷರಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2019, 13:28 IST
Last Updated 22 ಸೆಪ್ಟೆಂಬರ್ 2019, 13:28 IST
ಬೆಳಗಾವಿಯಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಸನ್ಮಾನಿಸಲಾಯಿತು
ಬೆಳಗಾವಿಯಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಸನ್ಮಾನಿಸಲಾಯಿತು   

ಬೆಳಗಾವಿ: ‘ಬೆಂಗಳೂರಿನಲ್ಲಿ3 ಎಕರೆ ಜಾಗದಲ್ಲಿಹಾಗೂ ಬೆಳಗಾವಿಯಲ್ಲಿ 2 ಎಕರೆ ಜಾಗದಲ್ಲಿ ನೌಕರರ ಭವನ ನಿರ್ಮಿಸಲು ಸಿದ್ಧತೆ ನಡೆಸಲಾಗುತ್ತಿದೆ. ಶೀಘ್ರ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು’ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ತಿಳಿಸಿದರು.

ನಗರದ ಗಾಂಧಿ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಪ್ರದಾನ ಹಾಗೂ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಸಕ್ತ ಸಾಲಿನಲ್ಲಿ ನಗರದಲ್ಲಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಲಾಗುವುದು. ಉದ್ಘಾಟನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಆಹ್ವಾನಿಸುತ್ತೇವೆ’ ಎಂದು ತಿಳಿಸಿದರು.

ADVERTISEMENT

ಸಂತ್ರಸ್ತರಿಗೆ ಪರಿಹಾರ: ‘ಪ್ರವಾಹ ಸಂತ್ರಸ್ತರಿಗಾಗಿ ಸಂಘದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಲಾಗಿದೆ. ಜಿಲ್ಲಾ ಘಟಕದ ಪದಾಧಿಕಾರಿಗಳು ಕೂಡ ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಅಗತ್ಯ ಪರಿಹಾರ ಸಾಮಗ್ರಿಗಳನ್ನು ವಿತರಿಸಿದ್ದಾರೆ’ ಎಂದರು.

‘ಶಿಕ್ಷಕರ ಕಡ್ಡಾಯ ವರ್ಗಾವಣೆ ನೀತಿ ಶಿಕ್ಷಕರಿಗೆ ಮಾರಕವಾಗಿದೆ. ನಿಯಮ ತಿದ್ದುಪಡಿ ಮಾಡುವಂತೆ ಸರ್ಕಾರದ ಗಮನಕ್ಕೆ ತರಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಶಿಕ್ಷಕ ಸ್ನೇಹಿ ವರ್ಗಾವಣೆ ನಿಯಮ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಕಾರ್ಯಕ್ರಮದಲ್ಲಿ ಜಿಲ್ಲೆಯ ಸರ್ಕಾರಿ ನೌಕರರ162ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಗುತ್ತಿದೆ. 10 ಜನ ರೈತರ ಮಕ್ಕಳನ್ನೂಸನ್ಮಾನಿಸಲಾಗುತ್ತಿದೆ. ಸಂಘದ ಅಭಿವೃದ್ಧಿಗೆ ಸದಸ್ಯರು ಕೈಜೋಡಿಸಬೇಕು’ ಎಂದರು.

ಸಂಘದ ಗೌರವಾಧ್ಯಕ್ಷ ವಿ.ವಿ.ಶಿವರುದ್ರಯ್ಯ ಮಾತನಾಡಿ, ‘ನೌಕರರು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು’ ಎಂದು ಸಲಹೆ ನೀಡಿದರು.

ಸನ್ಮಾನ–ಪದಗ್ರಹಣ: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಸಂಘದ ಸದಸ್ಯರ‌ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ರಾಜ್ಯ ಸಂಘದ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ಜಗದೀಶ,ರಾಜ್ಯ ಘಟಕದ ಪದಾಧಿಕಾರಿಗಳಾದ ಆರ್.ಶ್ರೀನಿವಾಸ, ವಿ.ವಿ.ಶಿವರುದ್ರಯ್ಯ, ಮಲ್ಲಿಕಾರ್ಜುನ ಬಳ್ಳಾರಿ ಇದ್ದರು.

ನಾಗಾರ್ಜುನ ಮರೆಣ್ಣವರ ಸ್ವಾಗತಿಸಿದರು. ಮಹೇಶ ಚನ್ನಂಗಿ ನಿರೂಪಿಸಿದರು. ಅಂಜನಾ ಮುರಗೋಡ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.