ADVERTISEMENT

ಕೃಷ್ಣಾ ನದಿಗೆ ನೀರು: ಮಾಂಜರಿಯಲ್ಲಿ ಪ್ರತಿಭಟನೆ

ಜಿಲ್ಲಾಡಳಿತ ನಿರ್ಲಕ್ಷ್ಯ: ಕೋರೆ ಆರೋಪ

​ಪ್ರಜಾವಾಣಿ ವಾರ್ತೆ
Published 2 ಮೇ 2019, 14:32 IST
Last Updated 2 ಮೇ 2019, 14:32 IST
ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸುವಂತೆ ಆಗ್ರಹಿಸಿ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಬಳಿ ರೈತರು ಗುರುವಾರ ನಡೆಸಿದ ಪ್ರತಿಭಟನೆಯಲ್ಲಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಪಾಲ್ಗೊಂಡಿದ್ದರು
ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸುವಂತೆ ಆಗ್ರಹಿಸಿ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಬಳಿ ರೈತರು ಗುರುವಾರ ನಡೆಸಿದ ಪ್ರತಿಭಟನೆಯಲ್ಲಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಪಾಲ್ಗೊಂಡಿದ್ದರು   

ಚಿಕ್ಕೋಡಿ: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಮಾಂಜರಿ ಗ್ರಾಮದ ಬಳಿಯ ಚಿಕ್ಕೋಡಿ-ಮೀರಜ್ ರಸ್ತೆಯಲ್ಲಿ ಕೃಷ್ಣಾ ತೀರದ ರೈತರು ಗುರುವಾರ ಪ್ರತಿಭಟನೆ ನಡೆಸಿದರು.

‘ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗಿರುವುದರಿಂದ ಜನರು, ಜಾನುವಾರುಗಳಿಗೆ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಬೆಳೆಗಳು ಒಣಗುತ್ತಿವೆ. ದೂಧ್‌ಗಂಗಾ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆ ವತಿಯಿಂದ ಹಾಗೂ ಕೃಷ್ಣಾ ನದಿ ತೀರದ ಗ್ರಾಮಸ್ಥರ ಪರವಾಗಿ ಮೂರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ದೂರಿದರು.

ADVERTISEMENT

ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮಾತನಾಡಿ, ‘ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯನ್ನುಫೆಬ್ರುವರಿಯಲ್ಲೇ ಭೇಟಿಯಾಗಿ ಕೋಯ್ನಾ ಜಲಾಶಯದಿಂದ 4 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆ. ಆದರೆ, ಲೋಕಸಭಾ ಚುನಾವಣೆ ಬಂದಿದ್ದರಿಂದ ನೀರು ಬಿಡುಗಡೆಯಾಗಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಮೊದಲಾದವರ ಗಮನಕ್ಕೂ ತಂದಿದ್ದೇವೆ. ಇಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಲು ಜಿಲ್ಲಾ ಮತ್ತು ತಾಲ್ಲೂಕು ಆಡಳಿತವೇ ಕಾರಣ’ ಎಂದು ಆರೋಪಿಸಿದರು.

5 ಗಂಟೆ ರಸ್ತೆ ತಡೆ ನಡೆಸಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ತಹಶೀಲ್ದಾರ್‌ ಸಂತೋಷ ಬಿರಾದಾರ ಮನವಿ ಸ್ವೀಕರಿಸಿದರು. ‘ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ’ ಎಂದರು.

ಮುಖಂಡರಾದ ಅಣ್ಣಾಸಾಹೇಬ ಜೊಲ್ಲೆ, ಅಜಿತ ದೇಸಾಯಿ, ಭರತ ಬನವಣೆ, ಮಲ್ಲಪ್ಪ ಮೈಶಾಳೆ, ಮಲ್ಲಿಕಾರ್ಜುನ ಕೋರೆ, ತಾತ್ಯಾಸಾಹೇಬ ಕಾಟೆ, ಕಲ್ಲಪ್ಪ ಮಗೆನ್ನವರ, ಬಬನರಾವ ಭಿಲವಡೆ, ದಾದಾಸಾಹೇಬ ಭೋಜಕರ, ಬಾಳಾಸಾಹೇಬ ಕಾಡಾಪುರೆ, ಸುರೇಶ ಪಾಟೀಲ, ಶ್ರೀಧರ ಭೋಜಕರ, ಮೋಹನ ಲೋಕರೆ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.