ADVERTISEMENT

ಬೆಳಗಾವಿ | ಪ್ರತಿ ಕರ್ನಾಟಕ ರಾಜ್ಯೋತ್ಸವಕ್ಕೆ ₹5 ಲಕ್ಷ ಅನುದಾನ: ಡಾ.ಸಿ.ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 14:01 IST
Last Updated 4 ಮಾರ್ಚ್ 2023, 14:01 IST
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್‌ ಮಾತನಾಡಿದರು
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್‌ ಮಾತನಾಡಿದರು   

ಬೆಳಗಾವಿ: ‘ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಪ್ರಾಧಿಕಾರದಿಂದ ಪ್ರತಿವರ್ಷ ₹5 ಲಕ್ಷ ಅನುದಾನ ನೀಡಲಾಗುವುದು’ ಎಂದು ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು.

ನಗರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ‘ಬೆಳಗಾವಿಯಲ್ಲಿ ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವಕ್ಕೆ ವಿಶೇಷ ಅನುದಾನ ನೀಡಬೇಕು ಎಂಬುದು ಗಡಿ ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಬೇಡಿಕೆಯಾಗಿದೆ. ಇದಕ್ಕೆ ಪ್ರಾಧಿಕಾರದಿಂದ ನೆರವು ನೀಡಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸೋಮಶೇಖರ್‌, ‘ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ವಾರ್ಷಿಕ ₹5 ಲಕ್ಷ ಅನುದಾನ ಕೊಡಲಾವುದು’ ಎಂದು ಘೋಷಿಸಿದರು.

ADVERTISEMENT

ನಿರ್ಲಕ್ಷ್ಯ ತೋರಿದರೆ ಕ್ರಮ: ‘ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಅನುಷ್ಠಾನ ಮತ್ತು ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ. ಒಂದುವೇಳೆ ನಿಯಮ ಉಲ್ಲಂಘಿಸಿದರೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು’ ಸೋಮಶೇಖರ್ ಎಚ್ಚರಿಕೆ ನೀಡಿದರು.

‘ವಿವಿಧ ಸಂಘ-ಸಂಸ್ಥೆಗಳೂ ಗಡಿಭಾಗದ ಸಾಂಸ್ಕೃತಿಕ ಅಭಿವೃದ್ಧಿಗೆ ಸಾಮರಸ್ಯದಿಂದ ಕೆಲಸ ಮಾಡುತ್ತಿವೆ. ಕನ್ನಡದ ಅಸ್ಮಿತೆಗೆ ಧಕ್ಕೆ ಬಾರದಂತೆ ಉಳಿದ ಭಾಷೆಗಳೂ ಬೆಳೆಯಬೇಕು. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೂಲಸೌಕರ್ಯ ಹಾಗೂ ಶಿಕ್ಷಕರ ಕೊರತೆ ಉಂಟಾಗದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಯ ಕೆಲವಡೆ ಪ್ರೌಢಶಾಲೆಗಳಿಲ್ಲ. ಹೀಗಾಗಿ ಬಾಲಕಿಯರು ದೂರದ ಊರುಗಳಿಗೆ ಹೋಗಲಾಗದೆ, ಅರ್ಧಕ್ಕೆ ಶಿಕ್ಷಣ ಮೊಟುಕುಗೊಳಿಸುತ್ತಿದ್ದಾರೆ. ಬೇಡಿಕೆ ಇರುವ ಗ್ರಾಮಗಳಲ್ಲಿ ಪ್ರೌಢಶಾಲೆ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು. ಗಡಿಭಾಗದ ಗ್ರಾಮಗಳ ಶಾಲೆಗಳಿಗೆ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್‌ ಪಾಟೀಲ, ಉಪವಿಭಾಗಾಧಿಕಾರಿಗಳಾದ ಮಾಧವ ಗಿತ್ತೆ, ಬಲರಾಮ್ ಚವ್ಹಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಡಿಎಫ್ಒ ಹರ್ಷಭಾನು ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.