ADVERTISEMENT

ಮಹಾರಾಷ್ಟ್ರದಲ್ಲಿ ಜೋರು ಮಳೆ: ಮುನ್ನೆಚ್ಚರಿಕೆ ವಹಿಸಲು ಸಚಿವರ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 16:16 IST
Last Updated 15 ಅಕ್ಟೋಬರ್ 2020, 16:16 IST
ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ
ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ   

ಬೆಳಗಾವಿ: ‘ಮುಂಬೈ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ವಿಪರೀತ ಹಾನಿ ಸಂಭವಿಸಿದೆ. ಈ ಬಗ್ಗೆ ಚರ್ಚಿಸಲು ಶುಕ್ರವಾರ (ಅ.16) ಉನ್ನತ ಮಟ್ಟದ ಸಭೆ ಕರೆದಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

‘ಜಿಲ್ಲೆಯ ಮಳೆಯ ಹಾನಿ ಕುರಿತು ಈಗಾಗಲೇ ಅಧಿಕಾರಿಗಳಿಂದ ವರದಿ ಪಡೆದಿದ್ದೇನೆ. ಕಲಬುರ್ಗಿ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು, ಹಾನಿ ಪರಿಶೀಲನೆಗೆ ಅಧಿಕಾರಿಗಳ ತಂಡ ಕಳುಹಿಸಿದ್ದೇವೆ. ವರದಿ ಬಂದ ಮೇಲೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಹುಕ್ಕೇರಿಗೂ ಈಗಾಗಲೇ ಅಧಿಕಾರಿಗಳು ಭೇಟಿ ನೀಡಿದ್ದಾರೆ’ ಎಂದು ಹೇಳಿದ್ದಾರೆ.

‘ಮಹಾರಾಷ್ಟ್ರದಲ್ಲಿ ಮತ್ತೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಆದ ಮಳೆಯಿಂದ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ಬಗ್ಗೆ ಚರ್ಚಿಸಿದ್ದೇನೆ. ಬೋಟ್‌ಗಳ ವ್ಯವಸ್ಥೆ ಸೇರಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವ ಬಗ್ಗೆ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಆಲಮಟ್ಟಿಯಿಂದ ನೀರು ಬಿಡುಗಡೆಗೆ ವ್ಯವಸ್ಥೆ ಮಾಡಲಾಗಿದೆ. ನಾರಾಯಣಪುರ ಜಲಾಶಯದಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಆಲಮಟ್ಟಿ ಭಾಗದಲ್ಲಿ ಮಳೆಯ ಪ್ರಮಾಣ ತಗ್ಗಿದ ಬಗ್ಗೆ ವರದಿ ಇದೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

‘ಮಹಾರಾಷ್ಟ್ರದ ಸಿಂಧನೂರು, ರತ್ನಗಿರಿ ಭಾಗದಲ್ಲಿ ‌ಮಳೆ ಜಾಸ್ತಿ ಇದೆ. ಹೀಗಾಗಿ ಚಿಕ್ಕೋಡಿ ಭಾಗದಲ್ಲಿ ಕೃಷ್ಣಾ ನದಿ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ. ಪ್ರತಿ ಗಂಟೆಗೊಮ್ಮೆ ಮಹಾರಾಷ್ಟ್ರದ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆ ಜಾಸ್ತಿಯಾದರೆ ಎಚ್ಚರಿಕೆ ವಹಿಸಲು ಸೂಚನೆ ಕೊಟ್ಟಿದ್ದೇವೆ. ತಹಶೀಲ್ದಾರ್, ಪೊಲೀಸರ ಮೂಲಕ ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.