ADVERTISEMENT

ಪ್ರವಾಹ: ಅಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 7:00 IST
Last Updated 27 ಜುಲೈ 2021, 7:00 IST
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್‌ ಪ್ರವಾಹ ಜೊತೆ ಸಿದ್ದರಾಮಯ್ಯ ಚರ್ಚೆ.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್‌ ಪ್ರವಾಹ ಜೊತೆ ಸಿದ್ದರಾಮಯ್ಯ ಚರ್ಚೆ.   

ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮುಂದುವರಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಲ್ಲಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕೈಗೊಂಡಿರುವ‌ ಪರಿಹಾರ ಕ್ರಮಗಳ ಬಗ್ಗೆ ಮಂಗಳವಾರ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್‌ ಪ್ರವಾಹ ಪರಿಸ್ಥಿತಿ ಕುರಿತು ವಿವರಿಸಿದರು.

ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಗಣೇಶ ಹುಕ್ಕೇರಿ, ಮುಖಂಡರಾದ ವೀರಕುಮಾರ ಪಾಟೀಲ, ಎ.ಬಿ. ಪಾಟೀಲ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಹಾಜರಿದ್ದರು.

ADVERTISEMENT

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 2019ರಲ್ಲಿ ಉಂಟಾಗಿದ್ದ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೇ ಈ ಸರ್ಕಾರ ಪರಿಹಾರ ಕೊಟ್ಟಿಲ್ಲ. ಈ ಬಾರಿಯೂ ಪ್ರವಾಹ ಬಂದಿದೆ. ಜನರು ಮತ್ತೆ ಸಂಕಷ್ಟಕ್ಕೆ ‌ಒಳಗಾಗಿದ್ದಾರೆ. ಈ ವೇಳೆ ಮುಖ್ಯಮಂತ್ರಿಯೇ ರಾಜೀನಾಮೆ ಕೊಟ್ಟು ಹೊರ ನಡೆದಿದ್ದಾರೆ ಎಂದು ಟೀಕಿಸಿದರು.

ನಾನೂ ಸೇರಿದಂತೆ ಪಕ್ಷದ ನಾಯಕರೆಲ್ಲರೂ, ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇವೆ. ವಾಸ್ತವ ಪರಿಸ್ಥಿತಿಯನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ. ತುರ್ತಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಆಗ್ರಹಿಸುತ್ತೇವೆ ಎಂದರು.

ಸರ್ಕಾರವು ಪ್ರವಾಹ ಪರಿಹಾರ ಕಾರ್ಯಕ್ಕೆ ಮೊದಲ ಆದ್ಯತೆ‌ ಕೊಡಬೇಕು. ಅನಗತ್ಯ ಖರ್ಚುಗಳನ್ನು ಕಡಿತಗೊಳಿಸಿ ಆ ಹಣವನ್ನು ಪರಿಹಾರಕ್ಕೆ ಬಳಸಬೇಕು. ಇದಕ್ಕಾಗಿ ಚರ್ಚಿಸಲು ವಿಧಾನಮಂಡಲ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು. ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ ಇದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.