ADVERTISEMENT

ಅತಿವೃಷ್ಟಿ: ಬೆಳಗಾವಿ ಜಿಲ್ಲೆಯಲ್ಲಿ 19,035 ಜನರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 13:07 IST
Last Updated 24 ಜುಲೈ 2021, 13:07 IST

ಬೆಳಗಾವಿ: ‘ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಜಲಾವೃತಗೊಂಡಿರುವ ನದಿ ತೀರದ‌ ಗ್ರಾಮಗಳಲ್ಲಿ 19,035 ಜನರನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ಸದ್ಯಕ್ಕೆ 89 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಅಲ್ಲಿ 8,795 ಜನರಿಗೆ ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ. ಅತಿವೃಷ್ಟಿಯಿಂದ ಈವರೆಗೆ ಎರಡು ಸಾವು ಸಂಭವಿಸಿದೆ. 37 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಮಳೆಯ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಸದ್ಯಕ್ಕೆ ಯಾವುದೇ ರೀತಿಯ ತೊಂದರೆಗಳಿಲ್ಲ. ಎಲ್ಲ ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳು ಪ್ರವಾಹ ಪರಿಸ್ಥಿತಿ ಹಾಗೂ ಮಳೆಯ ಪ್ರಮಾಣದ ಬಗ್ಗೆ ನಿರಂತರ ನಿಗಾ ವಹಿಸಿದ್ದಾರೆ. ಜನರು‌ ಆತಂಕಪಡುವ ಅಗತ್ಯವಿಲ್ಲ. ಒಂದು ವೇಳೆ ಏನಾದರೂ ತೊಂದರೆಗಳು‌ ಕಂಡುಬಂದರೆ ಸ್ಥಳೀಯ ಅಧಿಕಾರಿಗಳಿಗೆ ತಕ್ಷಣವೇ ಮಾಹಿತಿ ನೀಡಬೇಕು. ನದಿಯ‌ ಹರಿವು ಹೆಚ್ಚಾಗಿರುವುದರಿಂದ ನದಿ ತೀರದ ಗ್ರಾಮಸ್ಥರು ಹಾಗೂ ರೈತರು ಎಚ್ಚರಿಕೆ ವಹಿಸಬೇಕು’ ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.