ADVERTISEMENT

‘ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಿ’

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 13:26 IST
Last Updated 18 ಡಿಸೆಂಬರ್ 2020, 13:26 IST
ಬೆಳಗಾವಿಯ ಮಸ್ಟರಿಂಗ್ ಕೇಂದ್ರದಲ್ಲಿ ನಡೆದಿರುವ ಸಿದ್ಧತೆಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಕ್ರವಾರ ಪರಿಶೀಲಿಸಿದರು
ಬೆಳಗಾವಿಯ ಮಸ್ಟರಿಂಗ್ ಕೇಂದ್ರದಲ್ಲಿ ನಡೆದಿರುವ ಸಿದ್ಧತೆಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಕ್ರವಾರ ಪರಿಶೀಲಿಸಿದರು   

ಬೆಳಗಾವಿ: ‘ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಗ್ರಾಮೀಣ ಮಟ್ಟದಲ್ಲಿ ಅತ್ಯಂತ ಪೈಪೋಟಿ ಕಂಡುಬರುವುದರಿಂದ ಅಧಿಕಾರಿಗಳು ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಜೊತೆಗೆ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.

‘ಚುನಾವಣಾ ಪ್ರಕ್ರಿಯೆಗಳ ಕುರಿತು ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದೆ. ಸಂದೇಹಗಳಿದ್ದರೆ ಸಂಬಂಧಿಸಿದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುವ ಮೂಲಕ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ತಾಲ್ಲೂಕು, ಹುಕ್ಕೇರಿ ಮತ್ತು ಖಾನಾಪುರ ತಾಲ್ಲೂಕುಗಳ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ, ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳ ಜೊತೆ ಚರ್ಚಿಸಿದರು. ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಸಿದ್ಧತೆಗಳನ್ನು ಪರಿಶೀಲಿಸಿದರು.

ಬೆಳಗಾವಿ ಕೇಂದ್ರಕ್ಕೆ ಭೇಟಿ ನೀಡಿದಾಗ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಖಾನಾಪುರ ತಾಲ್ಲೂಕಿನಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಹುಕ್ಕೇರಿ ತಾಲ್ಲೂಕಿನಲ್ಲಿ ಎಎಸ್ಪಿ ಅಮರನಾಥ್ ರೆಡ್ಡಿ, ಆಯಾ ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರರು ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.