ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ಉಪಾಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು ಪ್ರಜಾವಾಣಿ ಚಿತ್ರ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ 80 ವಿದ್ಯಾರ್ಥಿಗಳು ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅಸ್ವಸ್ಥಗೊಂಡ ಓರ್ವ ವಿದ್ಯಾರ್ಥಿನಿಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲು ಕರೆದೊಯ್ಯಲಾಗಿದೆ.
ತಾಲ್ಲೂಕು ಆಸ್ಪತ್ರೆಯಲ್ಲಿ 37 ಬಾಲಕರು ಹಾಗೂ 33 ಬಾಲಕಿಯರು, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 3 ಬಾಲಕರು ಹಾಗೂ 7 ಬಾಲಕಿಯರಿಗೆ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
‘ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ವಿದ್ಯಾರ್ಥಿಗಳು ವಾಂತಿ– ಭೇದಿಯಿಂದ ತೀವ್ರ ಅಸ್ವಸ್ಥರಾಗಿದ್ದರಿಂದ ತಾಲ್ಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ಗಡದ ‘ಪ್ರಜಾವಾಣಿ’ಗೆ ತಿಳಿಸಿದರು.
‘ಹಿರೇಕೋಡಿಯ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಉಪಾಹಾರ ಸೇವಿಸಿ ಅಸ್ವಸ್ಥಗೊಂಡ 101 ಬಾಲಕರನ್ನು ಹಾಗೂ 76 ಬಾಲಕಿಯರು ಸೇರಿದಂತೆ 177 ವಿದ್ಯಾರ್ಥಿಗಳು ಸ್ಥಳಕ್ಕೆ ಭೇಟಿ ನೀಡಿದ ವೈದ್ಯರ ತಂಡ ಹೊರ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ನೀಡಿದ್ದಾರೆ’ ಎಂದೂ ಅವರು ವಿವರಿಸಿದರು.
ಸ್ಥಳಕ್ಕೆ ಧಾವಿಸಿದ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಹಾಸ್ಟೆಲ್‌ನ ಸಿಬ್ಬಂದಿ ಹಾಗೂ ವೈದ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ವಸತಿ ನಿಲಯದಲ್ಲಿ ಶುದ್ಧ ನೀರು, ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ಕೊಡುವಂತೆ ತಾಕೀತು ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.